ಶಿವಮೊಗ್ಗ: ಕೋವಿಡ್ ಕೇರ್ ಸೆಂಟರ್ನಲ್ಲಿ ಕೋವಿಡ್ ಸೋಂಕು ವಾಸಿಯಾಗುವ ಬದಲು ಸೋಂಕು ಹೆಚ್ಚಾಗುತ್ತಿದೆ ಎಂದು ಕೋವಿಡ್ ಕೇರ್ ಸೆಂಟರ್ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರು ಆಂತಕ ವ್ಯಕ್ತಪಡಿಸಿದ್ದಾರೆ.
ನಗರದ ಹೊರವಲಯದ ಮಲ್ಲಿಗೆಹಳ್ಳಿಯ ದೇವರಾಜ ಅರಸ್ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಹಾಗೂ ಇಂಜಿನಿಯರಿಂಗ್ ಮತ್ತು ವೈದ್ಯಕೀಯ ವಿದ್ಯಾರ್ಥಿಗಳ ಹಾಸ್ಟೆಲ್ನಲ್ಲಿ ಕೋವಿಡ್ ಕೇರ್ ಸೆಂಟರ್ ತೆರೆಯಲಾಗಿದೆ. ಆದರೆ, ಈ ಎರಡು ಹಾಸ್ಟೆಲ್ಗಳು ಅವ್ಯವಸ್ಥೆಯ ಆಗರವಾಗಿವೆ. ಕೋವಿಡ್ ಕೇರ್ ಸೆಂಟರ್ ಮುಂದೆ ರಾಶಿ ರಾಶಿ ಕಸ ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ. ಸೋಂಕಿತರು ಆಹಾರ ಸೇವಿಸಿದ ನಂತರ ಅಳಿದುಳಿದ ಆಹಾರ ಪದಾರ್ಥಗಳನ್ನು ಈ ಕಸದ ರಾಶಿಯಲ್ಲಿ ಹಾಕುತ್ತಾರೆ. ಇಲ್ಲಿಗೆ ಬರುವ ಮೂಕ ಪ್ರಾಣಿಗಳು ಇದನ್ನು ಸೇವಿಸುತ್ತಿವೆ ಎಂದು ಸೋಂಕಿತರು ಆರೋಪಿಸಿದ್ದಾರೆ.
ಈ ಕೋವಿಡ್ ಕೇರ್ ಸೆಂಟರ್ನಲ್ಲಿ ಸ್ವಚ್ಛತೆ ಎಂಬುದೇ ಇಲ್ಲ. ಈ ಸೆಂಟರ್ನಲ್ಲಿ ಸ್ವಚ್ಛತೆ ಮಾಡಲು ಸಿಬ್ಬಂದಿಯೇ ಇಲ್ಲ. ಹೀಗಾಗಿ ಇಂತಹ ವಾತಾವರಣದಲ್ಲಿ ಇದ್ದರೆ ಸೋಂಕು ವಾಸಿಯಾಗುವ ಬದಲು ಮತ್ತಷ್ಟು ಉಲ್ಬಣವಾಗಲಿದೆ ಎಂದು ಸೋಂಕಿತರು ಆತಂಕ ವ್ಯಕ್ತಪಡಿಸಿದ್ದಾರೆ.
ಶಿವಮೊಗ್ಗದಲ್ಲಿ ಈ ಮೊದಲು ಕೊರೊನಾ ಪಾಸಿಟಿವ್ ಬಂದವರಿಗೆ ಹೋಂ ಐಸೋಲೋಷನ್ಗೆ ಅವಕಾಶ ನೀಡಲಾಗಿತ್ತು. ಆದರೆ ಹೋಂ ಐಸೋಲೋಷನ್ನಿಂದಾಗಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ ಎಂಬ ಕಾರಣದಿಂದಾಗಿ ಜಿಲ್ಲಾಡಳಿತ ಹೋಂ ಐಸೋಲೋಷನ್ಗೆ ಅವಕಾಶ ನೀಡದೇ ಕೋವಿಡ್ ಕೇರ್ ಸೆಂಟರ್ ಆರಂಭಿಸಿದೆ. ಜಿಲ್ಲೆಯಲ್ಲಿ ಒಟ್ಟು 17 ಕಡೆ ಕೋವಿಡ್ ಕೇರ್ ಸೆಂಟರ್ ತೆರೆಯಲಾಗಿದ್ದು, ಇದರಲ್ಲಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿಯೇ 9 ಕೋವಿಡ್ ಕೇರ್ ಸೆಂಟರ್ ಆರಂಭಿಸಲಾಗಿದೆ. ಸೋಂಕಿನ ಗುಣಲಕ್ಷಣ ಇಲ್ಲದಿದ್ದರೂ ಕೊರೊನಾ ಪಾಸಿಟಿವ್ ಪತ್ತೆಯಾದ ಸೋಂಕಿತರಿಗೆ ಕೋವಿಡ್ ಕೇರ್ ಸೆಂಟರ್ನಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಇಲ್ಲಿನ ಅವ್ಯವಸ್ಥೆ ಕಂಡ ಸೋಂಕಿತರು ನಮಗೆ ಕೋವಿಡ್ ಕೇರ್ ಸೆಂಟರ್ನಿಂದ ಮುಕ್ತಿ ಕೊಡಿಸಿ, ಹೋಂ ಐಸೋಲೋಷನ್ಗೆ ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿಕೊಂಡಿದ್ದಾರೆ.