ಬೆಂಗಳೂರು: ಕೊರೊನಾ ಹಾಟ್ ಸ್ಪಾಟ್ ಎಂದು ಗುರುತಿಸಲಾಗಿರುವ ರಾಜ್ಯದ 11 ಜಿಲ್ಲೆಗಳ ಜಿಲ್ಲಾಡಳಿತದೊಂದಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ವಿಡಿಯೋ ಸಂವಾದ ನಡೆಸಿದರು.
ಮಧ್ಯಾಹ್ನ 3 ಗಂಟೆಯಿಂದ ಸಂಜೆ 5.30 ರವರೆಗೆ ಗೃಹ ಕಚೇರಿ ಕೃಷ್ಣಾದಿಂದ ಬಳ್ಳಾರಿ, ದಕ್ಷಿಣ ಕನ್ನಡ, ಹಾಸನ, ಧಾರವಾಡ, ಬೆಳಗಾವಿ, ಮೈಸೂರು, ಶಿವಮೊಗ್ಗ, ತುಮಕೂರು, ಉಡುಪಿ, ಉತ್ತರ ಕನ್ನಡ, ಹಾಗೂ ಬೆಂಗಳೂರು ನಗರದ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಜಿಲ್ಲಾ ಆರೋಗ್ಯ ಅಧಿಕಾರಿಗಳೊಂದಿಗೆ ಸಿಎಂ ಸಂವಾದ ನಡೆಸಿದರು.
ಕೊರೊನಾ ಹರಡುವಿಕೆ ಪ್ರಮಾಣ, ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮ, ಆಸ್ಪತ್ರೆಗಳಲ್ಲಿನ ಚಿಕಿತ್ಸಾ ಸೌಲಭ್ಯ, ವೆಂಟಿಲೇಟರ್, ಆಕ್ಸಿಜನ್, ಬೆಡ್ಗಳ ಸಂಖ್ಯೆ, ಮರಣದ ಪ್ರಮಾಣ ಸೇರಿದಂತೆ ಸಂಪೂರ್ಣ ವಿವರ ಪಡೆದುಕೊಂಡರು.
ಈ ವೇಳೆ ಹಾಟ್ ಸ್ಪಾಟ್ ಜಿಲ್ಲೆಗಳಲ್ಲಿ ತಪಾಸಣೆಯನ್ನು ಮತ್ತಷ್ಟು ಹೆಚ್ಚಿಸಬೇಕು, ಮರಣದ ಪ್ರಮಾಣ ಕಡಿಮೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸೂಚನೆ ನೀಡಿದ್ದಾರೆ.