ಬೆಂಗಳೂರು: ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಕರ್ನಾಟಕ ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷ ಡಾ.ಮೊಹಮದ್ ಯೂಸುಫ್ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಯೂಸುಫ್ (65) ಹಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ ಸುಮಾರು 3 ಗಂಟೆ ವೇಳೆಗೆ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಖಚಿತಪಡಿಸಿದ್ದಾರೆ.
ಪಶುವೈದ್ಯರಾಗಿದ್ದ ಯೂಸುಫ್ ತದನಂತರ ಉದ್ಯಮಿಯಾಗಿ ಗುರುತಿಸಿಕೊಂಡಿದ್ದರು. ರಾಜ್ಯ ವಕ್ಫ್ ಬೋರ್ಡ್ಗೆ ಎರಡು ಬಾರಿ ಆಧ್ಯಕ್ಷರಾಗಿದ್ದರು. ಇದೇ ವರ್ಷ ನಡೆದ ವಕ್ಫ್ ಅಧ್ಯಕ್ಷರ ಚುನಾವಣೆಯಲ್ಲಿ ಆರು ಮತಗಳ ಅಂತರದಿಂದ ಗೆಲುವಿನ ನಗೆ ಬೀರಿದ್ದರು. ಮೃತರ ಅಂತ್ಯಸಂಸ್ಕಾರವನ್ನು ಗೋವಿಂದಪುರದಲ್ಲಿರುವ ಮುಜಾಮಿಲ್ ಮಸೀದಿಯ ಕಬರ್ ಸ್ಥಾನದಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.