ಧಾರವಾಡ:ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಈಗಾಗಲೇ ಸುಪ್ರೀಂಕೋರ್ಟ್ನಿಂದ ಜಾಮೀನು ಪಡೆದಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಈಗ ಸಾಕ್ಷಿ ನಾಶ ಪ್ರಕರಣದಲ್ಲೂ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಕಳೆದ ಆಗಸ್ಟ್ 11ರಂದು ಸುಪ್ರೀಂಕೋರ್ಟ್ ಕೊಲೆ ಆರೋಪ ಪ್ರಕರಣದಲ್ಲಿ ಷರತ್ತುಬದ್ಧ ಜಾಮೀನು ನೀಡಿತ್ತು. ಆದರೆ, ಸಾಕ್ಷ್ಯ ನಾಶ ಪ್ರಕರಣದಲ್ಲಿ ಜಾಮೀನು ಸಿಕ್ಕರಲಿಲ್ಲ. ಇಂದು ನಗರದ ಜನಪ್ರತಿನಿಧಿಗಳ ವಿರುದ್ಧದ ಪ್ರಕರಣಗಳ ವಿಚಾರಣಾ ವಿಶೇಷ ನ್ಯಾಯಾಲಯ ಸಾಕ್ಷ್ಯ ನಾಶ ಆರೋಪ ಪ್ರಕರಣದಲ್ಲಿಯೂ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಇದನ್ನೂ ಓದಿ:ಯೋಗೇಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ಸುಪ್ರೀಂನಿಂದ ಷರತ್ತುಬದ್ಧ ಜಾಮೀನು
ಜಾಮೀನು ಸಿಕ್ಕರೂ ಧಾರವಾಡಕ್ಕೆ ಎಂಟ್ರಿ ಇಲ್ಲ
ಕೊಲೆ ಹಾಗೂ ಸಾಕ್ಷ್ಯ ನಾಶ ಪ್ರಕರಣಗಳಲ್ಲಿ ಷರತ್ತುಬದ್ಧ ಜಾಮೀನು ಪಡೆದಿರುವ ವಿನಯ್ ಕುಲಕರ್ಣಿ, ಇಂದು ಅಥವಾ ನಾಳೆ ಜೈಲಿನಿಂದ ಬಿಡುಗಡೆ ಆಗುವ ಸಾಧ್ಯತೆ ಇದೆ. ಆದರೆ, ಸುಪ್ರೀಂಕೋರ್ಟ್ ಕೊಲೆ ಆರೋಪ ಪ್ರಕರಣದಲ್ಲಿ ಜಾಮೀನು ನೀಡುವ ವೇಳೆ ಧಾರವಾಡಕ್ಕೆ ಭೇಟಿ ನೀಡುವಂತಿಲ್ಲ ಎಂದು ಷರತ್ತು ವಿಧಿಸಿದೆ. ಹೀಗಾಗಿ ವಿನಯ್ ಕುಲಕರ್ಣಿಗೆ ಜಾಮೀನು ಸಿಕ್ಕರೂ ಧಾರವಾಡ ಪ್ರವೇಶಿಸಲು ಅವಕಾಶ ಇಲ್ಲದಂತಾಗಿದೆ.
ಪ್ರಕರಣದ ಹಿನ್ನೆಲೆ :
2016ರ ಜೂನ್ 15ರಂದು ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಹತ್ಯೆ ನಡೆದಿತ್ತು. ಜಿಮ್ನಿಂದ ಹೊರ ಬರುವ ವೇಳೆ ಕಣ್ಣಿಗೆ ಖಾರದ ಪುಡಿ ಎರಚಿ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ್ದ ಪೊಲೀಸರು ಸಾಕ್ಷ್ಯ ನಾಶಕ್ಕೆ ಯತ್ನಿಸಿದ ಆರೋಪ ಕೇಳಿ ಬಂದ ಹಿನ್ನೆಲೆ, ತನಿಖೆಯನ್ನು ಸಿಬಿಐಗೆ ವಹಿಸಲಾಗಿತ್ತು. ಅದರಂತೆ ತನಿಖೆ ನಡೆಸಿದ್ದ ಸಿಬಿಐ ಆರೋಪಿ ವಿನಯ ಕುಲಕರ್ಣಿಯನ್ನು ನವೆಂಬರ್ 5ರಂದು ವಶಕ್ಕೆ ಪಡೆದಿತ್ತು. ಅಂದಿನಿಂದ ವಿನಯ್ ಕುಲಕರ್ಣಿ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಪಟಾಕಿ ಸಿಡಿಸಿ ಕಾರ್ಯಕರ್ತರ ಸಂಭ್ರಮ:
ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದ ಸಾಕ್ಷಿನಾಶದ ಕೇಸ್ನಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಜಾಮೀನು ಮಂಜೂರಾದ ಹಿನ್ನೆಲೆ, ಕಾಂಗ್ರೆಸ್ ಕಾರ್ಯಕರ್ತರು, ಧಾರವಾಡದ ಕಲ್ಯಾಣನಗರದಲ್ಲಿರುವ ವಿನಯ್ ಕುಲಕರ್ಣಿ ನಿವಾಸದ ಎದುರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದರು.