ಬಾಗಲಕೋಟೆ: ಯುವ ಮತದಾರರನ್ನು ಮತಗಟ್ಟೆಯತ್ತ ಸೆಳೆಯುವ ನಿಟ್ಟಿನಲ್ಲಿ ಜಿಲ್ಲಾ ಸ್ವೀಪ್ ಯೋಜನೆಯಡಿ ಮತದಾನ ಜಾಗೃತಿಯ ಫ್ಯಾಶನ್ ಶೋ ಏರ್ಪಡಿಸಲಾಗಿತ್ತು.
ನಗರದ ಸರ್ಕಾರಿ ಮಹಿಳಾ ಪದವಿ ಪೂರ್ವ ಕಾಲೇಜ್ ಆವರಣದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲೂಕಾಡಳಿತ, ತಾಲೂಕಾ ಪಂಚಾಯತ್ ಸಹಯೋಗದಲ್ಲಿ ಮತದಾನ ಜಾಗೃತಿಗಾಗಿ ಫ್ಯಾಶನ್ ಶೋ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಮಹಿಳೆಯರು ಸಾಂಪ್ರದಾಯಿಕ ಉಡುಗೆ-ತೊಡುಗೆ, ಇಳಕಲ್ ಸೀರೆ ತೊಟ್ಟಿದ್ದರು. ಅಲ್ಲದೆ ಉಡುಗೆಯ ಮೇಲೆ ಮತದಾನದ ಮಹತ್ವವನ್ನು ಸಾರುವ ಘೋಷಣೆಯ ಫಲಕಗಳನ್ನು ಅಂಟಿಸಿಕೊಂಡು ಎಲ್ಲರ ಗಮನ ಸೆಳೆದರು.
ಪ್ರಾರಂಭದಲ್ಲಿ ಜಿ.ಪಂ ಸಿಇಓ ಗಂಗೂಬಾಯಿ ಮಾನಕರ ಅವರು ಪ್ಯಾಶನ್ ಶೋ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜಿಲ್ಲೆಯ ವಿದ್ಯಾವಂತ ಮಹಿಳೆಯರು ಮತದಾನ ಮಾಡಲು ಹಿಂದೇಟು ಹಾಕುತ್ತಿದ್ದಾರೆ. ಈ ನಿಟ್ಟಿನಲ್ಲಿ ಯುವ ಮತದಾರರನ್ನು ಸೆಳೆಯುವ ನಿಟ್ಟಿನಲ್ಲಿ ಮಹಿಳೆಯರಿಗಾಗಿ ಫ್ಯಾಶನ್ ಶೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಪ್ರಜಾಪ್ರಭುತ್ವ ಗಟ್ಟಿಗೊಳಿಸಲು ತಮಗೆ ದೊರಕಿರುವ ಮತದಾನದ ಹಕ್ಕನ್ನು ತಪ್ಪದೇ ಚಲಾಯಿಸಬೇಕು. ಮತದಾನದ ಹಕ್ಕು ಪಡೆದ ಪ್ರತಿಯೊಬ್ಬರು ಮತದಾನ ಮಾಡುವದರೊಂದಿಗೆ ಇತರರನ್ನು ಪ್ರೇರೇಪಿಸುವ ಕೆಲಸವಾಗಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ನಿಂಗಪ್ಪ ಗೋಟೆ, ಜಿ.ಪಂ ಮುಖ್ಯ ಲೆಕ್ಕಾಧಿಕಾರಿ ಶಾಂತಾ ಕಡಿ, ವಯಸ್ಕರ ಶಿಕ್ಷಣಾಧಿಕಾರಿ ಬಸವರಾಜ ಶಿರೂರ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಬಸರಿಗಿಡದ ಸೇರಿದಂತೆ ಇತರರು ಉಪಸ್ಥಿತರಿದ್ದರು.