ಬೆಂಗಳೂರು: ಭದ್ರಾವತಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಜೆಡಿಎಸ್ ಪಕ್ಷದ ಹಿರಿಯ ಮುಖಂಡ ಎಂ.ಜೆ.ಅಪ್ಪಾಜಿ ಗೌಡ ನಿಧನಕ್ಕೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸಂತಾಪ ವ್ಯಕ್ತಪಡಿಸಿದ್ದಾರೆ.
ನಮ್ಮ ಪಕ್ಷದ ಹಿರಿಯ ಮುಖಂಡ, ಮಾಜಿ ಶಾಸಕ ಹಾಗೂ ನನ್ನ ಆತ್ಮೀಯರೂ ಆದ ಅಪ್ಪಾಜಿ ಗೌಡ ಅವರ ನಿಧನದ ಸುದ್ದಿ ಕೇಳಿ ನನ್ನ ಮನಸ್ಸಿಗೆ ತೀವ್ರ ನೋವುಂಟಾಗಿದೆ. ನಮ್ಮ ಪಕ್ಷಕ್ಕೆ ಮತ್ತು ಶಿವಮೊಗ್ಗ ಜಿಲ್ಲೆಗೆ ತುಂಬಲಾಗದ ನಷ್ಟವುಂಟಾಗಿದೆ ಎಂದು ದೇವೇಗೌಡರು ಹೇಳಿದ್ದಾರೆ.
ನಾವೆಲ್ಲಾ ಈ ದಿನ ಒಬ್ಬ ಧೈರ್ಯವಂತ ಧೀಮಂತ ನಾಯಕನನ್ನು ಕಳೆದುಕೊಂಡಿದ್ದೇವೆ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಕುಟುಂಬದವರಿಗೆ ಮತ್ತು ಅವರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ತುಂಬಲಿ ಎಂದು ಪ್ರಾರ್ಥಿಸಿದ್ದಾರೆ.
ಹೆಚ್.ಡಿ ಕುಮಾರಸ್ವಾಮಿ ಟ್ವೀಟ್:
ಭದ್ರಾವತಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಜೆಡಿಎಸ್ ಪಕ್ಷದ ಹಿರಿಯ ಮುಖಂಡರಾದ ಎಂ.ಜೆ.ಅಪ್ಪಾಜಿ ಗೌಡ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ತೀರಾ ದುಃಖವಾಯಿತು. ದೇವರು ಮೃತರ ಆತ್ಮಕ್ಕೆ ಶಾಂತಿ ನೀಡಲಿ ಮತ್ತು ಅವರ ಕುಟುಂಬದವರಿಗೆ ಹಾಗೂ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ಕರುಣಿಸಲೆಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ನಲ್ಲಿ ಸಂತಾಪ ವ್ಯಕ್ತಪಡಿಸಿದ್ದಾರೆ.
ಇನ್ನು ಕೊರೊನಾ ಸೋಂಕಿಗೆ ಸಿಲುಕಿದ್ದ ಮಾಜಿ ಶಾಸಕ ಎಂ.ಜೆ ಅಪ್ಪಾಜಿಗೌಡ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಚಿವ ಡಿ.ವಿ ಸದಾನಂದಗೌಡ, ಆರೋಗ್ಯ ಸಚಿವ ಬಿ.ಶ್ರೀರಾಮುಲು, ಸುಧಾಕರ್, ಸಂಪುಟ ಸಹೋದ್ಯೋಗಿಗಳು ಸಂತಾಪ ಸೂಚಿಸಿದ್ದಾರೆ.
ಭದ್ರಾವತಿಯ ಮಾಜಿ ಶಾಸಕ ಅಪ್ಪಾಜಿಗೌಡ ಅವರು ನಿಧನರಾದ ಸುದ್ದಿ ಕೇಳಿ ತೀವ್ರ ದುಃಖವಾಯಿತು. ಕ್ಷೇತ್ರದ ಕಾರ್ಮಿಕರ ಹಿತರಕ್ಷಣೆಗೆ ಅವರ ಪರಿಶ್ರಮವನ್ನು ಮರೆಯಲಾಗದು. ದೇವರು ಅವರ ಕುಟುಂಬದವರಿಗೆ, ಅಭಿಮಾನಿಗಳಿಗೆ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಕೋರುತ್ತೇನೆ. ಓಂ ಶಾಂತಿ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
ಭದ್ರಾವತಿಯ ಮಾಜಿ ಶಾಸಕ ಅಪ್ಪಾಜಿ ಗೌಡ ಅವರು ಇನ್ನಿಲ್ಲ ಎಂದು ತಿಳಿದು ದುಃಖವಾಯಿತು. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಭಗವಂತನು ಅವರ ಕುಟುಂಬದವರಿಗೆ ಹಾಗೂ ಅನುಯಾಯಿಗಳಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ಮತ್ತು ಆರೋಗ್ಯ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ.
ಕಾರ್ಮಿಕರ ಪರ ಹೋರಾಟಗಳ ಮೂಲಕ ಸಾರ್ವಜನಿಕ ಬದುಕಿಗೆ ಕಾಲಿಟ್ಟ ಅಪ್ಪಾಜಿ ಗೌಡರ ನಿಧನದ ದುಃಖ ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ಮತ್ತು ಅಭಿಮಾನಿಗಳಿಗೆ ನೀಡಲಿ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಸಹ ಪ್ರಾರ್ಥಿಸಿದ್ದಾರೆ.