ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ನಿವಾಸಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದ ಪ್ರಕರಣವನ್ನು ಸಿಬಿಐಗೆ ವಹಿಸಿದ ಸರ್ಕಾರದ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಲಾಗಿದೆ.
ಈ ಅರ್ಜಿ ವಿಚಾರಣೆ ನಡೆಸಿರುವ ಹೈಕೋರ್ಟ್ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಐಟಿ ದಾಳಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠ ಜುಲೈ 22 ರಂದು ವಜಾಗೊಳಿಸಿ ಆದೇಶಿಸಿತ್ತು. ಈ ಆದೇಶ ಪ್ರಶ್ನಿಸಿ ಅರ್ಜಿದಾರರಾದ ಶಶಿಕುಮಾರ್ ಶಿವಣ್ಣ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ.
ಇಂದು ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ನೇತೃತ್ವದ ವಿಭಾಗೀಯ ಪೀಠ ಈ ಅರ್ಜಿಯನ್ನು ವಿಚಾರಣೆ ನಡೆಸಿತು. ಅರ್ಜಿದಾರರ ಪರ ಹಿರಿಯ ವಕೀಲ ಉದಯ್ ಹೊಳ್ಳ ಅವರ ವಾದ ಆಲಿಸಿದ ಪೀಠ, ಪ್ರತಿವಾದಿಗಳಾದ ರಾಜ್ಯ ಗೃಹ ಇಲಾಖೆ ಕಾರ್ಯದರ್ಶಿ ಹಾಗೂ ಅಧೀನ ಕಾರ್ಯದರ್ಶಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಸೆಪ್ಟೆಂಬರ್ 29ಕ್ಕೆ ಮುಂದೂಡಿತು.
ಪ್ರಕರಣದ ಹಿನ್ನೆಲೆ:
2019ರ ಸೆಪ್ಟೆಂಬರ್ 29ರಂದು ರಾಜ್ಯ ಸರ್ಕಾರ ಡಿ.ಕೆ. ಶಿವಕುಮಾರ್ ಮತ್ತಿತರರ ವಿರುದ್ಧ ಐಟಿ ದಾಖಲಿಸಿರುವ ಪ್ರಕರಣಗಳನ್ನು ತನಿಖೆ ನಡೆಸಲು ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ಗೆ ವಹಿಸಿ ಆದೇಶ ಹೊರಡಿಸಿದೆ. ಸರ್ಕಾರದ ಈ ಆದೇಶ ರದ್ದು ಕೋರಿ ಅರ್ಜಿದಾರರು 2020ರ ಜೂನ್ 6 ರಂದು ರಿಟ್ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾ. ಆರ್. ನಟರಾಜ್ ಅವರಿದ್ದ ಏಕ ಸದಸ್ಯ ಪೀಠ ಮನವಿ ತಿರಸ್ಕರಿಸಿ ಆದೇಶ ಹೊರಡಿಸಿತ್ತು. ಅರ್ಜಿ ವಿಚಾರಣೆ ವೇಳೆ ಸಿಬಿಐ ಪರ ವಾದಿಸಿದ್ದ ವಿಶೇಷ ಅಭಿಯೋಜಕ ಪಿ. ಪ್ರಸನ್ನ ಕುಮಾರ್, ಇಡಿ ದಾಖಲಿಸಿರುವ ಪ್ರಕರಣದಲ್ಲಿ ಭ್ರಷ್ಟಾಚಾರ ತಡೆ ಕಾಯ್ದೆ ಉಲ್ಲೇಖಿಸಿದೆ. ರಾಜ್ಯದಲ್ಲಿ ಸಿಬಿಐ ತನಿಖೆಗೆ ಸರ್ಕಾರ ಸಮ್ಮತಿಸಬೇಕು. ಪ್ರಕರಣದಲ್ಲಿ ಸರ್ಕಾರಿ ಅಧಿಕಾರಿಗಳ ಪಾತ್ರದ ಬಗ್ಗೆ ಆರೋಪಗಳಿವೆ. ಹೀಗಾಗಿ ತನಿಖೆಗೆ ಸರ್ಕಾರದ ಸಮ್ಮತಿ ಅಗತ್ಯವಿತ್ತು ಎಂದು ವಾದಿಸಿದ್ದರು.
2017ರ ಆಗಸ್ಟ್ ನಲ್ಲಿ ಐಟಿ ಅಧಿಕಾರಿಗಳು ಡಿ.ಕೆ ಶಿವಕುಮಾರ್ ಅವರಿಗೆ ಸೇರಿದ ಬೆಂಗಳೂರು ಮತ್ತು ದೆಹಲಿಯ ನಿವಾಸಗಳ ಮೇಲೆ ದಾಳಿ ನಡೆಸಿ ಕೋಟ್ಯಾಂತರ ರೂಪಾಯಿ ಹಣ ಹಾಗೂ ದಾಖಲೆಗಳನ್ನು ವಶಕ್ಕೆ ಪಡೆದಿತ್ತು. ಈ ಪ್ರಕರಣ ರಾಜ್ಯದಲ್ಲಿ ಸಾಕಷ್ಟು ಸಂಚಲನ ಮೂಡಿಸಿತ್ತು.