ಮಂಗಳೂರು: ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿಯವರ ಪರಮಾಧಿಕಾರವಾಗಿದೆ. ಆದರೂ ರಾಜ್ಯದ ಮುಖಂಡರು, ಪಕ್ಷದ ರಾಜ್ಯಾಧ್ಯಕ್ಷರು, ಕೇಂದ್ರದ ಮುಖಂಡರೊಂದಿಗೆ ಚರ್ಚಿಸಿ ಮುಖ್ಯಮಂತ್ರಿಗಳು ಈ ಬಗ್ಗೆ ಸರಿಯಾದ ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ಅವರು ಯಾವ ರೀತಿಯ ತೀರ್ಮಾನ ತೆಗೆದುಕೊಂಡರೂ ಎಲ್ಲರೂ ಅದಕ್ಕೆ ಬದ್ಧರಾಗಿರುತ್ತೇವೆ ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ತಮ್ಮ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳೂರು ಮ.ನ.ಪಾ ಮೇಯರ್ ಆಯ್ಕೆಗೆ ಮೀಸಲಾತಿ ಪಟ್ಟಿ ಬಿಡುಗಡೆಯಾದ ತಕ್ಷಣ ಜಿಲ್ಲಾಧಿಕಾರಿ ಹಾಗೂ ಸರ್ಕಾರದ ನೇತೃತ್ವದಲ್ಲಿ ನಿಗದಿಯಾಗುತ್ತದೆ. ಆ ಬಳಿಕ ಮೇಯರ್ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದರು.
ಮಂಗಳೂರಿನಲ್ಲಿ ಜನವರಿ 27 ರಂದು ಸಿಎಎ ಪರವಾಗಿ ನಡೆಯಲಿರುವ ಸಮಾವೇಶದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಒಂದು ಲಕ್ಷಕ್ಕೂ ಅಧಿಕ ಜನ ಭಾಗಿಯಾಗುವ ಸಾಧ್ಯತೆಯಿದೆ. ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಇಡೀ ರಾಷ್ಟ್ರದಲ್ಲಿ ಜಾರಿಗೊಳಿಸುವ ಈ ಕಾರ್ಯದಲ್ಲಿ ನಾವೆಲ್ಲರೂ ಒಂದಾಗಿ ಕಾರ್ಯಕ್ರಮ ಯಶಸ್ವಿಗೊಳಿಸುತ್ತೇವೆ ಎಂದು ತಿಳಿಸಿದರು.