ಬೆಂಗಳೂರು: ಉಡುಪಿ ಜಿಲ್ಲೆಯಲ್ಲಿ ಪ್ರವಾಹಕ್ಕೆ ಸಿಲುಕಿದ್ದ 200ಕ್ಕೂ ಅಧಿಕ ಜನರನ್ನು ಸ್ಥಳಾಂತರಿಸಲಾಗಿದೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಉಡುಪಿ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಸುರಿದ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಕೆಲವು ಗ್ರಾಮಗಳು ಜಲಾವೃತಗೊಂಡಿರುತ್ತವೆ. ರಸ್ತೆ ಸಂಪರ್ಕವು ಸಹ ಕಡಿತವಾಗಿದೆ. ಈ ಕುರಿತು ಜಿಲ್ಲಾಡಳಿತ ನನ್ನ ಗಮನಕ್ಕೆ ತಂದಿದ್ದು, ತಕ್ಷಣವೇ ಸುಮಾರು 250 ಸದಸ್ಯರನ್ನು ಒಳಗೊಂಡ ಎಸ್ ಡಿ ಆರ್ ಎಫ್ ತಂಡವನ್ನು ತಡರಾತ್ರಿಯೇ ಸ್ಥಳಕ್ಕೆ ಕಳುಹಿಸಲಾಗಿದೆ ಎಂದಿದ್ದಾರೆ.
ಈಗಾಗಲೇ 200 ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ. ಜೊತೆಗೆ ಎಸ್ ಡಿ ಆರ್ ಎಫ್ ತಂಡವೂ ಕೂಡ ಕೆಲವೇ ಸಮಯದಲ್ಲಿ ಸ್ಥಳಕ್ಕೆ ತಲುಪಲಿದ್ದು, ಜಿಲ್ಲಾಡಳಿತಕ್ಕೆ ಎಲ್ಲಾ ಕ್ರಮಗಳನ್ನು ತಗೆದುಕೊಳ್ಳಲು ಸೂಚಿಸಲಾಗಿದೆ ಎಂದಿದ್ದಾರೆ. ಈ ಬಗ್ಗೆ ಕಂದಾಯ ಸಚಿವರಾದ ಆರ್.ಅಶೋಕ್ ಅವರ ಜೊತೆ ಮಾತನಾಡಿ ರಕ್ಷಣಾ ಇಲಾಖೆಯ ಒಂದು ಹೆಲಿಕಾಪ್ಟರ್ ಅನ್ನು ನೀಡಲು ಕೇಳಿಕೊಂಡಿರುತ್ತೇನೆ ಎಂದು ತಿಳಿಸಿದ್ದಾರೆ.