ಬೆಂಗಳೂರು: ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಜೆಟಿಎಸ್ ಮತ್ತು ಅರ್ಥಶಾಸ್ತ್ರ ವಿಷಯದ ಪರೀಕ್ಷೆ ಯಶಸ್ವಿಯಾಗಿ ನಡೆದಿದೆ. ರಾಜ್ಯದ 94 ಪರೀಕ್ಷಾ ಕೇಂದ್ರಗಳಲ್ಲಿ 510 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
ಪರೀಕ್ಷೆಗಳಿಗೆ 528 ವಿದ್ಯಾರ್ಥಿಗಳು ನೊಂದಾಯಿಸಿಕೊಂಡಿದ್ದು, 18 ವಿದ್ಯಾರ್ಥಿಗಳು ಗೈರಾಗಿದ್ದರು. ಎರಡನೇ ದಿನದ ಪರೀಕ್ಷೆಯು ಯಾವುದೇ ಸಮಸ್ಯೆಯಿಲ್ಲದೇ ಅಚ್ಚುಕಟ್ಟಾಗಿ ನಡೆದಿದೆ. ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಹೆಚ್ಚಿನ ನಿಗಾ ವಹಿಸಲಾಗಿತ್ತು. ಈ ದಿನ ಕಂಟೈನ್ಮೆಂಟ್ ವಲಯಕ್ಕೆ ಸೇರಿದ ಯಾವುದೇ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿಲ್ಲ. 438 ಮಂದಿ ಶಾಲಾ ವಿದ್ಯಾರ್ಥಿಗಳು ಮತ್ತು 83 ಮಂದಿ ಖಾಸಗಿ ಅಭ್ಯರ್ಥಿಗಳು ಹಾಗೂ ಮೂವರು ವಲಸೆ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.
ಶನಿವಾರ ಗಣಿತ ಪರೀಕ್ಷೆ ನಡೆಯಲಿದ್ದು, ನಿನ್ನೆಯಂತೆಯೇ ಪರೀಕ್ಷಾ ಕೇಂದ್ರಗಳಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಸಾಮಾಜಿಕ ಅಂತರ ಪಾಲಿಸುವ ಮೂಲಕ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಡೆಯುತ್ತಿರುವ ಪರೀಕ್ಷೆಯ ಯಶಸ್ಸಿಗೆ ಪೋಷಕರು ಹೆಚ್ಚಿನ ಸಹಕಾರ ನೀಡಬೇಕೆಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.
ಇಂದು ಶಿಕ್ಷಣ ಇಲಾಖೆಯ ಎಲ್ಲಾ ಜಿಲ್ಲೆಗಳ ಆಡಳಿತ ಉಪನಿರ್ದೇಶಕರೊಂದಿಗೆ ವಿಡಿಯೋ ಸಂವಾದ ನಡೆಸಿ, ಎಸ್.ಎಸ್.ಎಲ್.ಸಿ ಪರೀಕ್ಷೆಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ಅವರು ಸೂಚಿಸಿದರು.