ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸಹಕಾರ ಇಲಾಖೆಯ ಕಾರ್ಯಸಾಧನೆ ಬಗ್ಗೆ ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು.
ಸಿಎಂ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಪುಸ್ತಕವನ್ನು ಬಿಡುಗಡೆಗೊಳಿಸಿದರು. ಪುಸ್ತಕ ಬಿಡುಗಡೆ ನಂತರ ಮಾತನಾಡಿದ ಸಚಿವ ಎಸ್.ಟಿ. ಸೋಮಶೇಖರ್, ನಾನು ಮಂತ್ರಿಯಾಗಿ ಮೂರು ತಿಂಗಳು ಕಳೆದಿದೆ. ನನ್ನ 3 ತಿಂಗಳ ಅವಧಿಯ ಪ್ರವಾಸ, ಇಲಾಖೆಯ ಕಾರ್ಯದ ಬಗ್ಗೆ ಪುಸ್ತಕದಲ್ಲಿ ಉಲ್ಲೇಖ ಮಾಡಲಾಗಿದೆ. ಇದರ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದರು.
ನಮ್ಮ ಇಲಾಖೆಯಿಂದ ಏಪ್ರಿಲ್ ಒಂದರಿಂದ ಈವರೆಗೆ 14.5 ಕೋಟಿ ಸಾಲ ವಿತರಣೆಗೆ ಕ್ರಮ ಕೈಗೊಂಡಿದ್ದೇವೆ. ಬಡವರ, ಎಸ್ ಸಿ, ಎಸ್ ಟಿ ಸಮುದಾಯಕ್ಕೆ, ರೈತರಿಗೆ ಸಾಲ ಕೊಡಲು ಕ್ರಮ ಕೈಗೊಳ್ಳಲಾಗಿದೆ. ಅಪೆಕ್ಸ್ ಬ್ಯಾಂಕ್ ಮತ್ತು ಡಿಸಿಸಿ ಬ್ಯಾಂಕ್ ಅನ್ನು ಒಂದೇ ಸಾಫ್ಟ್‌ವೇರ್ ನಲ್ಲಿ ತರಲು ತೀರ್ಮಾನ ಮಾಡಿದ್ದೇವೆ. ಎಪಿಎಂಸಿ ಸೆಸ್ ಕಡಿಮೆ ಮಾಡಲು ನಿರ್ಧರಿಸಿದ್ದೇವೆ ಎಂದರು.
ಈ ಸಂದರ್ಭದಲ್ಲಿ ಡಿಸಿಎಂ ಅಶ್ವತ್ಥ ನಾರಾಯಣ್, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಹಕಾರ ಇಲಾಖೆ ಸಚಿವ ಎಸ್.ಟಿ ಸೋಮಶೇಖರ್ ಉಪಸ್ಥಿತರಿದ್ದರು.