ತುಮಕೂರು: 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಹಿಳಾ ಸಾಹಿತಿಯನ್ನು ಸಮ್ಮೇಳನದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ ನಗರ ಘಟಕದ ಅಧ್ಯಕ್ಷೆ ಅನ್ನಪೂರ್ಣ ವೆಂಕಟನಂಜಪ್ಪ ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈವರೆಗೂ 84 ಕನ್ನಡ ಸಾಹಿತ್ಯ ಸಮ್ಮೇಳನಗಳು ನಡೆದಿವೆ. ಇದರಲ್ಲಿ ಕೇವಲ ನಾಲ್ಕು ಬಾರಿ ಮಾತ್ರ ಮಹಿಳೆಯರು ಸಮ್ಮೇಳನದ ಅಧ್ಯಕ್ಷರಾಗಿದ್ದರು. ಹಾಗಾಗಿ ಸಾಮಾಜಿಕ ನ್ಯಾಯ ಪರಿಗಣಿಸಿ ಈ ಬಾರಿ ಕಲಬುರಗಿ ಜಿಲ್ಲೆಯಲ್ಲಿ ನಡೆಯಲಿರುವ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಹಿಳೆಯರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಬೇಕು ಎಂದು ಮನವಿ ಮಾಡಿದರು.
ಜಿಲ್ಲಾ ಲೇಖಕಿಯರ ಸಂಘದ ಅಧ್ಯಕ್ಷೆ ಜಿ.ಮಲ್ಲಿಕಾ ಬಸವರಾಜು ಮಾತನಾಡಿ, ಹಿಂದಿನ ಕಾಲದಿಂದಲೂ ಮಹಿಳಾ ಸಾಹಿತಿಗಳು ಕನ್ನಡ ಸಾಹಿತ್ಯ ರಚನೆಯಲ್ಲಿ ತೊಡಗಿಕೊಂಡು ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಆದರೆ ಮಹಿಳೆಗೆ ಸೂಕ್ತ ಪ್ರಾತಿನಿಧ್ಯ ನೀಡದಿರುವುದು ವಿಷಾದನೀಯ ಸಂಗತಿ. ಹಾಗಾಗಿ ಈ ಬಾರಿ ನಡೆಯಲಿರುವ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಮಹಿಳಾ ಸಾಹಿತಿಯನ್ನು ಆಯ್ಕೆ ಮಾಡಬೇಕು. ಈ ಬಾರಿಯ ಸಮ್ಮೇಳನದಲ್ಲಿ ಪುರುಷರನ್ನು ಅಧ್ಯಕ್ಷರನ್ನಾಗಿ ಮಾಡುವ ಹುನ್ನಾರ ನಡೆಯುತ್ತಿದೆ. ನಾಳೆ ಬೆಂಗಳೂರಿನಲ್ಲಿ ನಡೆಯಲಿರುವ ಸಭೆಯಲ್ಲಿ ಸಮ್ಮೇಳನದ ಅಧ್ಯಕ್ಷರನ್ನು ಆಯ್ಕೆ ಮಾಡಲಿದ್ದು, ಮಹಿಳಾ ಸಾಹಿತಿಯನ್ನು ಅಧ್ಯಕ್ಷರನ್ನಾಗಿ ಮಾಡಬೇಕು ಎಂದು ಒತ್ತಾಯಿಸಿದರು.