ತುಮಕೂರು : ಜಿಲ್ಲೆಯಲ್ಲಿ ಗ್ರಾಮ ಪಂಚಾಯತ್ ಚುನಾವಣೆಗೆ ನಾಮಪತ್ರ ಸಲ್ಲಿಸಿದರೂ, ಅವಿರೋಧವಾಗಿ ಆಯ್ಕೆಯಾಗುವಂತೆ ವ್ಯವಸ್ಥಿತವಾಗಿ ಸ್ಥಳೀಯ ಮುಖಂಡರು ಯೋಜನೆ ರೂಪಿಸುತ್ತಿದ್ದಾರೆ. ಮತ್ತು ಗ್ರಾಮ ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗುವ ವ್ಯಕ್ತಿಯಿಂದ ಇಂತಿಷ್ಟು ಹಣ ಎಂಬಂತೆ ಸಂಗ್ರಹ ಮಾಡಲಾಗುತ್ತಿದೆ ಎಂಬ ಆರೋಪಗಳು ಕೇಳಿ ಬರುತ್ತಿದೆ.
ಹೀಗಾಗಿ, ಈ ರೀತಿಯ ಪ್ರಕರಣಗಳು ಕಂಡು ಬಂದರೆ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ಸಿದ್ಧತೆ ನಡೆಸಿದೆ. ಈಗಾಗಲೇ ಜಿಲ್ಲೆಯ ಎರಡು ಗ್ರಾಮ ಪಂಚಾಯತ್ಗಳಲ್ಲಿ ಸದಸ್ಯತ್ವ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಆದರೆ ಈ ಬಗ್ಗೆ ಯಾವುದೇ ರೀತಿಯ ಲಿಖಿತ ದೂರುಗಳು ಜಿಲ್ಲಾಡಳಿತಕ್ಕೆ ಬಂದಿರಲಿಲ್ಲ. ಕೇವಲ ಮೌಖಿಕ ದೂರುಗಳ ಬಂದ ಹಿನ್ನೆಲೆ, ಈ ಎರಡು ಗ್ರಾಮ ಪಂಚಾಯತ್ಗಳಿಗೆ ತಕ್ಷಣ ಭೇಟಿ ನೀಡಿದ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಯಾವುದೇ ರೀತಿಯ ಪ್ರಜಾಪ್ರಭುತ್ವ ವಿರೋಧಿ ಚಟುವಟಿಕೆಗಳು ನಡೆದಿಲ್ಲ ಎಂದು ಜಿಲ್ಲಾಡಳಿತಕ್ಕೆ ಅಧಿಕಾರಿಗಳು ವರದಿ ನೀಡಿದ್ದಾರೆ.
ಓದಿ : ಚಿಕ್ಕಮಗಳೂರು: ಗ್ರಾಮಸ್ಥರಿಂದ ಗ್ರಾ.ಪಂ ಚುನಾವಣೆ ಬಹಿಷ್ಕಾರದ ಎಚ್ಚರಿಕೆ
ಗ್ರಾಮ ಪಂಚಾಯತ್ಗಳಿಗೆ ಭೇಟಿ ನೀಡುವ ಅಧಿಕಾರಿಗಳು ನೀಡುವ ವರದಿಯಲ್ಲಿ ಸದಸ್ಯತ್ವ ಮಾರಾಟ ಮಾಡಲಾಗುತ್ತಿದೆ ಎಂಬುವುದು ಸ್ಪಷ್ಟವಾದರೆ, ಅದು ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಾಗುತ್ತದೆ. ಅಂತಹ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಈಟಿವಿ ಭಾರತಕ್ಕೆ ತಿಳಿಸಿದ್ದಾರೆ.