ಮಂಗಳೂರು/ತುಮಕೂರು/ಕೊಡಗು : ಉಪ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿರುವುದರಿಂದ ಕಡಬ, ಮಂಗಳೂರು, ತುಮಕೂರು, ಕೊಡಗಿನಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.
ಮಂಗಳೂರಿನ ಕೊಡಿಯಾಲ್ ಬೈಲ್ ನಲ್ಲಿರುವ ಬಿಜೆಪಿ ಜಿಲ್ಲಾ ಕಚೇರಿ ಮುಂಭಾಗದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿತಿಂಡಿ ಹಂಚಿ ವಿಜಯೋತ್ಸವ ಆಚರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಶಾಸಕ ಭರತ್ ಶೆಟ್ಟಿ ಅವರು ಈ ಗೆಲುವು ನಿರೀಕ್ಷಿತವಾಗಿತ್ತು. ಸುಭದ್ರ ಸರ್ಕಾರ ನೀಡಲು ಇನ್ನು ಸಾಧ್ಯವಾಗಲಿದೆ. ಜನಪರ ಅಭಿವೃದ್ಧಿ ಕೆಲಸ ಮಾಡಲು ಶಕ್ತಿ ಸಿಕ್ಕಿದಂತಾಗಿದೆ ಎಂದರು.
ಉಪಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿರುವುದರಿಂದ ಕಡಬದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು.
ತುಮಕೂರು ನಗರದ ಟೌನ್ ಹಾಲ್ ವೃತ್ತದಲ್ಲಿ ನಗರ ಶಾಸಕ ಜ್ಯೋತಿಗಣೇಶ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿ, ಪರಸ್ಪರ ಸಿಹಿ ಹಂಚಿ ಸಂತಸದ ಗೆಲುವಿನ ನಗೆ ಬೀರಿದರು.
ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಾರ್ವಜನಿಕರಿಗೆ ಸಿಹಿ ಹಂಚಿ ಬಿಜೆಪಿ ಪರ ಘೋಷಣೆ ಕೂಗಿ ವಿಜಯೋತ್ಸವ ಆಚರಿಸಿದ್ದಾರೆ.