ತುಮಕೂರು: ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ನಿಶ್ಚಿತ. ನಮ್ಮ ಪಕ್ಷ ಯಾವಾಗಲು ಸವಾಲನ್ನು ಸ್ವೀಕರಿಸುತ್ತಲೇ ಬಂದಿದೆ. ಇತ್ತೀಚಿಗೆ ನಡೆದ ಉಪ ಚುನಾವಣೆಯಲ್ಲಿ 17 ಅಭ್ಯರ್ಥಿಗಳ ಪೈಕಿ 15 ಬಿಜೆಪಿ ಅಭ್ಯರ್ಥಿಗಳು ಗೆದ್ದಿದ್ದಾರೆ. ಒಂದೇ ಒಂದು ಸ್ಥಾನದಲ್ಲಿಯೂ ಜೆಡಿಎಸ್ ಗೆಲ್ಲಲಿಲ್ಲ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ತಮ್ಮ ಪಕ್ಷದ ಸಾಧನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಶಿರಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಅನೇಕ ಯೋಜನೆಗಳು ಶಿರಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮತದಾರರಿಗೆ ಈಗಾಗಲೇ ತಲುಪಿವೆ. ಹೀಗಾಗಿ, ಜೆಡಿಎಸ್ ಪಕ್ಷವನ್ನಾಗಲಿ ಅಥವಾ ಕಾಂಗ್ರೆಸ್ ಪಕ್ಷವನ್ನಾಗಲಿ ಗೆಲ್ಲಿಸುವುದರಿಂದ ಯಾವುದೇ ಪ್ರಯೋಜನವಿಲ್ಲ ಎಂಬ ಅಭಿಪ್ರಾಯಕ್ಕೆ ಈ ಬಾರಿ ಕ್ಷೇತ್ರದ ಮತದಾರರು ಬಂದಿದ್ದಾರೆ. ಹಾಗಾಗಿ ಈ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ನಿಶ್ಚಿತ ಎಂದರು.
ಶಿರಾ ವಿಧಾನಸಭಾ ಕ್ಷೇತ್ರದಲ್ಲಿ 264 ಬೂತ್ಗಳಿದ್ದು, ಅಲ್ಲೆಲ್ಲಾ ಬಿಜೆಪಿ ಕಾರ್ಯಕರ್ತರು ಕೆಲಸ ಮಾಡುತ್ತಿದ್ದಾರೆ. ಪ್ರತಿ ಬೂತ್ನಲ್ಲಿ 45 ಮಂದಿ ಕಾರ್ಯಕರ್ತರು ಸಕ್ರಿಯರಾಗಿದ್ದಾರೆ. ಉಪಚುನಾವಣೆ ಹಿನ್ನೆಲೆ ವಾಟ್ಸಾಪ್ ಗ್ರೂಪ್ಗಳನ್ನು ರಚಿಸಲಾಗುತ್ತಿದೆ. ಶತಾಯಗತಾಯ ಶಿರಾ ವಿಧಾನಸಭಾ ಕ್ಷೇತ್ರವನ್ನು ಬಿಜೆಪಿ ತೆಕ್ಕೆಗೆ ತೆಗೆದುಕೊಳ್ಳಲು ಕಾರ್ಯಕರ್ತರನ್ನು ಮಾನಸಿಕವಾಗಿ ತಯಾರಿಸಲಾಗುತ್ತದೆ ಎಂದು ತಿಳಿಸಿದರು.