ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಪಟ್ಟಣದಲ್ಲಿ ಅನಧಿಕೃತವಾಗಿ ರಸ್ತೆ ಬದಿ ನಿರ್ಮಿಸಲಾಗಿದ್ದ ನೂರಾರು ಗೂಡಂಗಡಿಗಳನ್ನು ಬೆಳ್ಳಂ ಬೆಳಗ್ಗೆ ಪಟ್ಟಣ ಪಂಚಾಯಿತಿ ಅಧಿಕಾರಿಗಳು ತೆರವುಗೊಳಿಸಿದರು.
ಜೆಸಿಬಿಗಳು, ಟ್ರ್ಯಾಕ್ಟರ್ಗಳು ಹಾಗೂ ಪಟ್ಟಣ ಪಂಚಾಯಿತಿ ಸಿಬ್ಬಂದಿಗಳೊಂದಿಗೆ ಆಗಮಿಸಿದ ಮುಖ್ಯಾಧಿಕಾರಿ ಮಂಜುನಾಥ್, ಬೆಳಗ್ಗೆ 5.30ರ ವೇಳೆಗೆ ಬಂದು ಅನಧಿಕೃತ ಅಂಗಡಿಗಳನ್ನು ತೆರವುಗೊಳಿಸಿದರು. ಪಟ್ಟಣದ ಬಸ್ ನಿಲ್ದಾಣ ಅಮಾನಿಕೆರೆ ಸುತ್ತಮುತ್ತಲ ಪ್ರದೇಶ ಸೇರಿದಂತೆ ಪ್ರಮುಖ ವಾಣಿಜ್ಯ ಪ್ರದೇಶಗಳಲ್ಲಿ ಇದ್ದ ಗೂಡಂಗಡಿಗಳನ್ನು ತೆರವುಗೊಳಿಸಲಾಯಿತು.
ಎರಡು ದಿನಗಳ ಹಿಂದಷ್ಟೇ ಗೂಡಂಗಡಿಗಳನ್ನು ಇರಿಸಿಕೊಂಡಿದ್ದವರಿಗೆ ಸ್ವಯಂ ತೆರವುಗೊಳಿಸುವಂತೆ ಸೂಚನೆ ನೀಡಲಾಗಿತ್ತು. ಆದರೆ, ಇದಕ್ಕೆ ಸ್ಪಂದಿಸದ ಹಿನ್ನೆಲೆಯಲ್ಲಿ ಇಂದು ಏಕಾಏಕಿ ಬಂದು ಈ ಕ್ರಮವನ್ನು ಕೈಗೊಳ್ಳಲಾಗಿದೆ. ಈ ಗೂಡಂಗಡಿಗಳು ರಸ್ತೆ ಬದಿಯಲ್ಲಿ ಬೇಕಾಬಿಟ್ಟಿ ಇದ್ದ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗಿದ್ದು, ಇದನ್ನು ತೆರವುಗೊಳಿಸುವಂತೆ ಸಾಕಷ್ಟು ಬಾರಿ ಸಾರ್ವಜನಿಕರು ಮನವಿ ಮಾಡಿದ್ರು.