ತುಮಕೂರು: ಇಡೀ ರಾಜ್ಯದಲ್ಲಿ ಹೆಚ್ಚು ಕೋವಿಡ್ ಕೇಸ್ ಇದ್ದ ತುಮಕೂರಿಗೆ ಬಂದು ಇಂದು ಸಮಾಲೋಚನೆ ಮಾಡಿದ್ದೇನೆ. ಕೋವಿಡ್ ತಡೆಯೋದರಲ್ಲಿ ಇಲ್ಲಿನ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ವಿಶೇಷ ಪ್ರಯತ್ನ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮೆಚ್ಚುಗೆ ವ್ಯಕ್ತಪಡಿಸಿದರು.
ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಎರಡನೇ ಅಲೆಯಲ್ಲಿ 0.66% ಮರಣ ಪ್ರಮಾಣ ಇದೆ. ಪಾಸಿಟಿವ್ ರೇಟ್ ಏನಾದ್ರೂ ಮಾಡಿ 10%ರ ಒಳಗೆ ಇಳಿಸಬೇಕಿದೆ ಎಂದರು. ಜಿಲ್ಲೆಗೆ 23 ಕೆಎಲ್ ಆಕ್ಸಿಜನ್ ಪೂರೈಸಲಾಗಿದೆ. ವಾರ್ ರೂಂ, ನೋಡಲ್ ಅಧಿಕಾರಿಗಳನ್ನ ನೇಮಿಸಲಾಗಿದೆ. ಯಾವುದೇ ಕಾರಣಕ್ಕೂ ಆಕ್ಸಿಜನ್ ಸಮಸ್ಯೆಯಾಗದಂತೆ ನೋಡಿಕೊಳ್ಳಲಾಗಿದೆ ಎಂದು ತಿಳಿಸಿದರು.
ಇದಕ್ಕೂ ಮುನ್ನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಕೋವಿಡ್-19 ಪರಿಶೀಲನಾ ಸಭೆ ನಡೆಸಿದರು. ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ, ಡಿಸಿಎಂ ಅಶ್ವತ್ಥ ನಾರಾಯಣ, ಸಂಸದ ಬಸವರಾಜ್ ಸೇರಿದಂತೆ ಜಿಲ್ಲೆಯ ಎಲ್ಲಾ ಶಾಸಕರು ಹಾಜರಿದ್ದರು. ಅಲ್ಲದೆ ವಿವಿಧ ಇಲಾಖೆ ಅಧಿಕಾರಿಗಳು ಕೂಡ ಸಭೆಯಲ್ಲಿ ಹಾಜರಿದ್ದು, ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದರು.
ಇನ್ನೂ ಸಿದ್ಧಗಂಗಾ ಮಠದಲ್ಲಿ ಆರಂಭಿಸಲಾಗಿರುವ ಕೋವಿಡ್ ಆರೈಕೆ ಕೇಂದ್ರಕ್ಕೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಭೇಟಿ ನೀಡಿ ಮಾಹಿತಿ ಪಡೆದರು. ಜಿಲ್ಲಾಧಿಕಾರಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಭೇಟಿ ನೀಡಿದ ಸಿಎಂ ಕೆಲಕಾಲ ನೀಡಲಾಗುತ್ತಿರುವ ಚಿಕಿತ್ಸಾ ಸೌಲಭ್ಯಗಳನ್ನು ಪರಿಶೀಲನೆ ನಡೆಸಿದರು.