ತುಮಕೂರು: ಶಿರಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಉಪ ಚುನಾವಣಾ ಪ್ರಚಾರ ನಡೆಸುತ್ತಿದ್ದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಅಡ್ಡಿ ಪಡಿಸಿದ ಆರೋಪದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ.
ಬೆಳಗ್ಗೆಯಿಂದಲೂ ಕುಮಾರಸ್ವಾಮಿ ಹತ್ತಕ್ಕೂ ಹೆಚ್ಚು ಗ್ರಾಮಗಳಲ್ಲಿ ರೋಡ್ ಶೋ ನಡೆಸುತ್ತಿದ್ದರು. ಸಂಜೆ ಸುಮಾರು 5.30ರ ವೇಳೆಗೆ ಬ್ರಹ್ಮಸಂದ್ರ ಗ್ರಾಮಕ್ಕೆ ತಮ್ಮ ಕಾರ್ಯಕರ್ತರೊಂದಿಗೆ ಆಗಮಿಸುತ್ತಿದ್ದಂತೆ ಕೆಲ ಕಾಂಗ್ರೆಸ್ ಕಾರ್ಯಕರ್ತರು ಇದಕ್ಕೆ ಅಡ್ಡಿಪಡಿಸಿದ್ದರು.
ಈ ವೇಳೆ ರೊಚ್ಚಿಗೆದ್ದ ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಮಾರಾಮಾರಿಗೆ ಇಳಿದರು. ಸ್ಥಳದಲ್ಲಿದ್ದ ಬೆರಳೆಣಿಕೆಯಷ್ಟು ಪೊಲೀಸರು ಲಘು ಲಾಠಿ ಪ್ರಹಾರ ಮಾಡುವ ಮೂಲಕ ಗುಂಪನ್ನು ಚದುರಿಸಿದರು. ಇದೇ ವೇಳೆ ಭಾಷಣ ಮಾಡುತ್ತಿದ್ದ ಕುಮಾರಸ್ವಾಮಿ ಕೂಡ ಕಾಂಗ್ರೆಸ್ ಕಾರ್ಯಕರ್ತರ ಪುಂಡಾಟಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.