ತುಮಕೂರು: ಜಿಲ್ಲೆಯಲ್ಲಿ ಶಿಕ್ಷಕ ಸಮುದಾಯದಲ್ಲಿಯೂ ಕೊರೊನಾ ಸೋಂಕು ಹೆಚ್ಚುತ್ತಿದ್ದುಎಸ್ಎಸ್ಎಲ್ಸಿ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವ ವಿದ್ಯಾರ್ಥಿಗಳು ಪೂರಕ ಶೈಕ್ಷಣಿಕ ವ್ಯವಸ್ಥೆ ಇಲ್ಲದೆ ಪರದಾಡುವಂತಾಗಿದೆ.
ಜನತಾ ಕರ್ಫ್ಯೂಗೂ ಮುನ್ನ ಏ.20 ರ ವರೆಗೆ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಶಿಕ್ಷಕರು ಶಾಲೆಗಳಲ್ಲಿ ತರಗತಿಗಳನ್ನು ನಡೆಸಿದ್ದರು. ಈ ವೇಳೆ ಶಾಲೆಗೆ ತೆರಳಿ ಓಡಾಡಿದ್ದ ಶಿಕ್ಷಕರು ಸೋಂಕಿಗೆ ಒಳಗಾಗಿದ್ದಾರೆ. ಪ್ರೌಢಶಾಲೆ ಶಿಕ್ಷಕರೇ ಕೊರೊನಾ ಸೋಂಕಿಗೆ ತುತ್ತಾಗಿದ್ದು, ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೀವ್ರ ಹಿನ್ನಡೆಯಾಗಿದೆ.
ತುಮಕೂರು ಶೈಕ್ಷಣಿಕ ಜಿಲ್ಲೆಯಲ್ಲಿ 40 ಮತ್ತು ಮಧುಗಿರಿ ಶೈಕ್ಷಣಿಕ ಜಿಲ್ಲೆಯಲ್ಲಿ 74 ಮಂದಿ ಶಿಕ್ಷಕರು ಕೊರೊನಾಗೆ ತುತ್ತಾಗಿದ್ದಾರೆ. ತುಮಕೂರು ಶೈಕ್ಷಣಿಕ ಜಿಲ್ಲೆಯಲ್ಲಿ 20 ಮಂದಿ ಶಿಕ್ಷಕರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಧುಗಿರಿ ಜಿಲ್ಲೆ ವ್ಯಾಪ್ತಿಯಲ್ಲಿ 31 ಮಂದಿ ಶಿಕ್ಷಕರು ಸೋಂಕಿನಿಂದ ಪಾರಾಗಿದ್ದು, ಇನ್ನೂ 43 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದುವೆರೆಗೂ ಜಿಲ್ಲೆಯ ಕುಣಿಗಲ್ ತಾಲೂಕಿನಲ್ಲಿ ಮೂವರು ಶಿಕ್ಷಕರು, ಗುಬ್ಬಿ, ಕೊರಟಗೆರೆ, ಶಿರಾ ತಾಲೂಕಿನಲ್ಲಿ ತಲಾ ಓರ್ವ ಶಿಕ್ಷಕ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಪ್ರತಿ ಶಾಲೆಗಳ ವ್ಯಾಪ್ತಿಯಲ್ಲಿಯೇ ಮಕ್ಕಳಿಗೆ ಆನ್ಲೈನ್ ಮೂಲಕ ಪಾಠ ಮಾಡುವಂತೆ ಸೂಚಿಸಲಾಗಿದೆ. ಆದರೆ ಶಿಕ್ಷಕರು ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಕಾರಣ ಮಕ್ಕಳ ವಿದ್ಯಾಭ್ಯಾಸದ ಮೇಲೆ ತೀವ್ರ ಪರಿಣಾಮ ಬೀರುತ್ತಿದೆ.
ಇದನ್ನೂ ಓದಿ: ಕೊಪ್ಪಳದಲ್ಲಿ 538 ಪಾಸಿಟಿವ್ ಪ್ರಕರಣಗಳು ಪತ್ತೆ, 3 ಸಾವು
ಉಳಿದ ಕೆಲವು ಶಿಕ್ಷಕರು ಆನ್ಲೈನ್ ಮೂಲಕ ಪಾಠ ಮಾಡುತ್ತಿದ್ದಾರೆ. ಆದರೆ ಶೇ.30 ರಷ್ಟು ವಿದ್ಯಾರ್ಥಿಗಳ ಬಳಿ ಮೊಬೈಲ್ ಮತ್ತು ಆನ್ಲೈನ್ ಸಂಪರ್ಕವಿಲ್ಲದೆ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಹೀಗಾಗಿ ಮೊಬೈಲ್ ಇಲ್ಲದಂತಹ ವಿದ್ಯಾರ್ಥಿಗಳನ್ನು ತಲುಪುವುದು ಸಾಕಷ್ಟು ತೊಂದರೆಯಾಗಿದೆ. ಅಲ್ಲದೆ ಮೊಬೈಲ್ ಇಲ್ಲದಂತಹ ಮಕ್ಕಳನ್ನು ಗುರುತಿಸಿ ಸ್ಥಳಕ್ಕೆ ತೆರಳಿ ಸುತ್ತಮುತ್ತಲ ವಿದ್ಯಾರ್ಥಿಗಳನ್ನು ಒಂದೆಡೆ ಕೂರಿಸಿ ಪಾಠ ಮಾಡುವಂತೆ ಶಿಕ್ಷಕರಿಗೆ ತಿಳಿಸಲಾಗುತ್ತಿದೆ. ಆದರೆ ಗ್ರಾಮೀಣ ಭಾಗದಲ್ಲಿಯೂ ಕೊರೊನಾ ವ್ಯಾಪಕವಾಗಿ ಹರಡಿರುವುದರಿಂದ ಶಿಕ್ಷಕರು, ಪೋಷಕರು ಮತ್ತು ಮಕ್ಕಳಲ್ಲಿಯೂ ಭೀತಿ ಮನೆ ಮಾಡಿದೆ.