ತುಮಕೂರು: ಉಪಮುಖ್ಯಮಂತ್ರಿ ಅಶ್ವತ್ಥನಾರಾಯಣ ಜಿಲ್ಲೆಯ ಪಾಲಿಟೆಕ್ನಿಕ್ ಕಾಲೇಜಿನ ಆಟದ ಮೈದಾನಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಜಿಲ್ಲೆಯ ವಿಶ್ವವಿದ್ಯಾಲಯ ಸಮೀಪದಲ್ಲಿರುವ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಸುತ್ತಮುತ್ತಲ ಪ್ರದೇಶವನ್ನು ಪರಿಶೀಲನೆ ನಡೆಸಿದ ಉಪಮುಖ್ಯಮಂತ್ರಿ ಅಶ್ವತ್ಥನಾರಾಯಣ ಅಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಿದರು. ಇನ್ನು ಪಾಲಿಟೆಕ್ನಿಕ್ ಕಾಲೇಜಿನ ಸಿಬ್ಬಂದಿ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳು ಸಚಿವರಿಗೆ ಸಾಥ್ ನೀಡಿದರು.
ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ದಾಖಲಾತಿ ಹೆಚ್ಚಿಸಲು ಹಾಗೂ ವಿದ್ಯಾರ್ಥಿಗಳಲ್ಲಿ ತಾಂತ್ರಿಕ ಶಿಕ್ಷಣದ ಮನೋಭಾವವನ್ನು ಮೂಡಿಸಲು ಪೂರಕ ಕ್ರಮ ಕೈಗೊಳ್ಳಬೇಕಿದೆ. ಇನ್ನು ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಕ್ಯಾಂಪಸ್ ರೂಪಿಸಬೇಕಿದೆ. ಇದಕ್ಕಾಗಿ ಸ್ಥಳ ಪರಿಶೀಲನೆ ನಡೆಸಿದ್ದೇನೆ ಎಂದು ಪತ್ರಕರ್ತರಿಗೆ ಮಾಹಿತಿ ನೀಡಿದರು.
ಇನ್ನು ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. ಅಲ್ಲದೇ ಹಾಸ್ಟೆಲ್ನಲ್ಲಿ ಮೂಲ ಸೌಲಭ್ಯದ ಕೊರತೆ ಇದೆ. ಇದನ್ನು ಸಚಿವರು ಪರಿಗಣಿಸಿ ಕ್ರಮ ಕೈಗೊಳ್ಳಲಿದ್ದಾರೆ ಎಂಬ ಆಶಾಭಾವನೆಯನ್ನು ವಿದ್ಯಾರ್ಥಿಗಳು ವ್ಯಕ್ತಪಡಿಸಿದ್ದಾರೆ.