ತುಮಕೂರು: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಸಾಕಷ್ಟು ಕಡಿಮೆಯಾಗುತ್ತಿದೆ, ಒಂದು ವಾರದೊಳಗೆ ಶೇ.10ರಷ್ಟು ಬರಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದ್ದಾರೆ.
ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಹೆಚ್ಚುವರಿಯಾಗಿ ನಾವು ಜಿಲ್ಲೆಯಲ್ಲಿ ಯಾವುದೇ ಲಾಕ್ಡೌನ್ ಮಾಡಲಿಲ್ಲ. ಸರ್ಕಾರ ಲಾಕ್ಡೌನ್ ನಿಯಮಾವಳಿಗಳನ್ನು ಮಾತ್ರ ಅನುಸರಿಸಿದ್ದೇವೆ. ಅಲ್ಲದೇ ಮುಂದಿನ ದಿನಗಳಲ್ಲಿ ಜವಳಿ ಅಂಗಡಿಗಳನ್ನು ತೆರೆದು ವ್ಯಾಪಾರ ಮಾಡಲು ಅವಕಾಶ ನೀಡಬಹುದೇ ಎಂಬುದನ್ನು ಅಧಿಕಾರಿಗಳೊಂದಿಗೆ ಚರ್ಚೆ ನಡೆಸುತ್ತಿದ್ದೇವೆ ಎಂದರು.
ಕೋವಿಡ್-19 ಎರಡನೇ ಅಲೆಯ ನಿಯಂತ್ರಣಕ್ಕಾಗಿ ನಿತ್ಯ ಆರು ಸಾವಿರ ಕೋವಿಡ್ ಪರೀಕ್ಷೆಗಳನ್ನು ನಡೆಸುವಂತೆ ಸೂಚಿಸಲಾಗಿದೆ. ಸೋಂಕಿತರ ಪ್ರಾಥಮಿಕ ಸಂಪರ್ಕಿತರನ್ನು ಹೆಚ್ಚು ಪತ್ತೆ ಹಚ್ಚಿ ಪರೀಕ್ಷೆಗೆ ಒಳಪಡಿಸುವಂತೆಯೂ ತಿಳಿಸಲಾಗಿದೆ ಎಂದರು.
ಜಿಲ್ಲೆಯಲ್ಲಿ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿದೆ ಎಂಬ ಭಾವನೆಯಲ್ಲಿ ಪರೀಕ್ಷೆಗಳನ್ನು ಕಡಿಮೆ ಮಾಡಬಾರದು. ಈ ಹಿಂದಿಗಿಂತಲೂ ಹೆಚ್ಚಾಗಿ ಕೋವಿಡ್ ಪರೀಕ್ಷೆ ಮಾಡಬೇಕು. ಇದರಿಂದ ಕೊರೊನಾ ನಿರೀಕ್ಷೆಗೂ ಮೀರಿ ನಿಯಂತ್ರಣಕ್ಕೆ ತರಬಹುದಾಗಿದೆ ಎಂದರು.
ಈಗಾಗಲೇ ಜಿಲ್ಲಾದ್ಯಂತ ಗುರುತಿಸಿರುವ ಕೆಂಪುವಲಯ ಮತ್ತು ಹಾಟ್ಸ್ಪಾಟ್ ಪ್ರದೇಶಗಳಲ್ಲಿನ ಸೋಂಕಿತರ ಕುಟುಂಬಸ್ಥರೆಲ್ಲರನ್ನೂ ಪರೀಕ್ಷೆಗೆ ಒಳಪಡಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗೇಂದ್ರಪ್ಪ ಅವರಿಗೆ ನಿರ್ದೇಶಿಸಿರುವುದಾಗಿ ತಿಳಿಸಿದರು.