ತುಮಕೂರು: ನಗರದ ಕನ್ನಡ ಭವನದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮತ್ತು ತುಮಕೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನಿಂದ ಕನ್ನಡ ರಾಜ್ಯೋತ್ಸವ ಹಾಗೂ ಕಾವ್ಯೋತ್ಸವ ಸಮಾರಂಭ ನಡೆಯಿತು. ಕಾರ್ಯಕ್ರಮವನ್ನು ಸಾಹಿತಿ ನಾಡೋಜ ಡಾ. ಬರಗೂರು ರಾಮಚಂದ್ರಪ್ಪ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ದೇಶದಲ್ಲಿ ಶಾಂತಿ ಮತ್ತು ಸೌಹಾರ್ದತೆ ಕಾಪಾಡಿಕೊಳ್ಳುವ ಅಗತ್ಯವಿದ್ದು, ಸಹಿಷ್ಣುತೆಯನ್ನು ಕಾಪಾಡಿಕೊಳ್ಳಬೇಕಿದೆ. ನಾಡಗೀತೆಯಲ್ಲಿ ಸರ್ವಜನಾಂಗದ ಶಾಂತಿಯ ತೋಟ ಎಂದು ಹೇಳುತ್ತೇವೆ. ನಾವೆಲ್ಲರೂ ಸರ್ವಜನಾಂಗದ ಶಾಂತಿಯ ತೋಟವನ್ನಾಗಿ ನಾಡನ್ನು ಮಾಡಿದ್ದೇವೆಯೇ ಎಂಬುದನ್ನು ಪ್ರಶ್ನಿಸಿಕೊಳ್ಳಬೇಕಾಗಿದೆ.
ಅಯೋಧ್ಯೆ ತೀರ್ಪು ಸರಿಯೇ ತಪ್ಪೇ ಎಂದು ಚರ್ಚೆ ಮಾಡುವುದರ ಬದಲಾಗಿ ಸುಪ್ರೀಂ ಕೋರ್ಟಿನ ತೀರ್ಪನ್ನು ಎಲ್ಲರೂ ಸ್ವಾಗತಿಸಬೇಕಿದೆ. ಜೊತೆಗೆ ಮುಂದಿನ ದಿನಗಳಲ್ಲಿ ಈ ತೀರ್ಪು ಬೇರೆ ವಿಷಯಗಳಿಗೆ ದಾರಿದೀಪವಾಗಬೇಕಿದೆ ಎಂದು ಅಭಿಪ್ರಾಯಪಟ್ಟರು.