ತುಮಕೂರು: 16 ರಾಷ್ಟ್ರಗಳ ಜೊತೆಯಲ್ಲಿ ಮಾತುಕತೆ ನಡೆಸಿ ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ ಒಪ್ಪಂದಕ್ಕೆ ಸಹಿ ಮಾಡಲು ಹೊರಟಿರುವ ಕೇಂದ್ರ ಸರ್ಕಾರದ ನೀತಿ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ, ಕರ್ನಾಟಕ ಪ್ರಾಂತ ರೈತ ಸಂಘ, ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ತೆರಿಗೆ ರಹಿತ ಹಾಲು ಮತ್ತು ಹಾಲು ಉತ್ಪನ್ನಗಳನ್ನು ಆಮದು ಮಾಡಿಕೊಳ್ಳಲು ಅವಕಾಶ ನೀಡುವ ಪ್ರಾದೇಶಿಕ ಸಮಗ್ರ ಆರ್ಥಿಕ ಒಪ್ಪಂದದಿಂದ ದೇಶದ ರೈತರಿಗೆ ತೊಂದರೆಯಾಗುತ್ತದೆ. ಆದ್ದರಿಂದ ಈ ಒಪ್ಪಂದಕ್ಕೆ ಭಾರತ ಸರ್ಕಾರ ಸಹಿ ಹಾಕಬಾರದು ಎಂದು ಒತ್ತಾಯಿಸಿ ಜಂಟಿ ರೈತ ಸಂಘಟನೆಗಳು ಆಗ್ರಹಪಡಿಸಿದವು.
ಭಾರತ ಸರ್ಕಾರ ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ ಒಪ್ಪಂದಕ್ಕೆ ಹಾಕಬಾರದು. ಇದರಿಂದ ದೇಶದ ಹೈನುಗಾರಿಕೆ ಅವಲಂಬಿಸಿರುವ 15 ಕೋಟಿ ಕುಟುಂಬಗಳು ಬೀದಿಗೆ ಬರುತ್ತವೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ಆಕ್ರೋಶ ವ್ಯಕ್ತಪಡಿಸಿದರು.