ತುಮಕೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ನೀಡಿದರೆ ಪಕ್ಷ ಸೇರ್ಪಡೆಗೊಳ್ಳುವುದಾಗಿ ಜೆಡಿಎಸ್ ಹಾಗೂ ಬಿಜೆಪಿ ಪಕ್ಷದ ಶಾಸಕರು ಸಂಪರ್ಕದಲ್ಲಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಜಿ ಪರಮೇಶ್ವರ್ ತಿಳಿಸಿದ್ದಾರೆ.
ತುರುವೇಕೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆಗೆ ಮುನ್ನವೇ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಳ್ಳಲು ಮುಖಂಡರು ಉತ್ಸುಕರಾಗಿದ್ದು, ವಿಧಾನ ಪರಿಷತ್ ಸದಸ್ಯ ಅಲ್ಲಂ ವೀರಭದ್ರಪ್ಪ ಸಮಿತಿ ಈ ಕುರಿತು ಪರಿಶೀಲನೆ ನಡೆಸಲಿದೆ. ಪಕ್ಷದ ಶಕ್ತಿಯನ್ನು ಹೆಚ್ಚಿಸಿಕೊಳ್ಳುವ ಉದ್ದೇಶದಿಂದ ಅಂತಹವರನ್ನು ಕಾಂಗ್ರೆಸ್ಗೆ ಸೇರ್ಪಡೆ ಮಾಡಿಕೊಳ್ಳುತ್ತೇವೆ ಎಂದು ತಿಳಿಸಿದರು.
ಬಿಜೆಪಿ ನೀರಿನ ಮೇಲಿನ ಗುಳ್ಳೆಯಂತೆ:
ಆಯಾ ವಿಧಾನಸಭಾ ಕ್ಷೇತ್ರದಲ್ಲಿ ಪರಿಸ್ಥಿತಿಯನ್ನು ಅವಲೋಕಿಸಿ ಸಾಧಕ-ಬಾಧಕಗಳನ್ನು ಪರಿಶೀಲನೆ ನಡೆಸಿ ಪಕ್ಷಕ್ಕೆ ಬರುವಂತಹ ಅನ್ಯ ಪಕ್ಷದ ಶಾಸಕರು ಹಾಗೂ ಮುಖಂಡರನ್ನು ಸೇರಿಸಿಕೊಳ್ಳಲಾಗುವುದು ಎಂದು ಹೇಳಿದರು. ರಾಜ್ಯದಲ್ಲಿ ಬಿಜೆಪಿ ಸರ್ಕಾರವು ನೀರಿನ ಮೇಲಿನ ಗುಳ್ಳೆಯಂತೆ. ಯಾವ ಸಂದರ್ಭದಲ್ಲಿ ಗುಳ್ಳೆ ಒಡೆದು ಹೋಗಲಿದೆ ಎಂದು ಹೇಳಲು ಸಾಧ್ಯವಿಲ್ಲ ಎಂದರು.
ದಿನ ಬೆಳಗಾದರೆ ಸಿಎಂ ಬದಲಾವಣೆ ವಿಚಾರ:
ದಿನ ಬೆಳಗಾದರೆ ಬಿಜೆಪಿ ಮುಖಂಡರು ಮುಖ್ಯಮಂತ್ರಿ ಬದಲಾವಣೆ ಮಾಡಬೇಕು ಎಂಬ ಧ್ವನಿ ಎತ್ತುತ್ತಿದ್ದಾರೆ. ಹೀಗಾಗಿ ಇಂತಹ ಹೇಳಿಕೆ ನೀಡುವ ಕುರಿತಂತೆ ಸರಿಪಡಿಸಿಕೊಳ್ಳಿ, ಇಲ್ಲದಿದ್ದರೆ ಮುಖ್ಯಮಂತ್ರಿ ಬಿಎಸ್ವೈ ರಾಜೀನಾಮೆ ಕೊಡಬೇಕೆಂದು ಸಲಹೆ ಕೊಟ್ಟಿರುವುದಾಗಿ ಪರಮೇಶ್ವರ್ ಹೇಳಿದರು.
ಇದನ್ನೂ ಓದಿ: ನಾಳೆಯಿಂದ Unlock 4.O ಜಾರಿ: ಸಿಎಂ ನಿವಾಸದಲ್ಲಿ ಮಹತ್ವದ ಸಭೆ
ಇಬ್ಬರು ಅಧಿಕಾರಿಗಳು ಕಿತ್ತಾಡಿಕೊಂಡು ಚಾಮರಾಜನಗರದಲ್ಲಿ 30ಕ್ಕೂ ಹೆಚ್ಚು ಕೊರೊನಾ ಸೋಂಕಿತರು ಸಾವನ್ನಪ್ಪುವಂತೆ ಮಾಡಿದ್ದಾರೆ. ಇದಕ್ಕೆ ಯಾರು ಹೊಣೆಗಾರರಾಗುತ್ತಾರೆ ಎಂದು ಮಾಜಿ ಡಿಸಿಎಂ ಪ್ರಶ್ನಿಸಿದರು. ಪ್ರಸ್ತುತ ಬಿಜೆಪಿ ಸರ್ಕಾರ ಸುಭದ್ರವಾಗಿ ಇಲ್ಲ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದರು.