ತುಮಕೂರು: ಲೋಕಸಭೆ ಚುನಾವಣೆ ಮುಗಿದ ನಂತರ ಹೇಮಾವತಿ ನದಿ ನೀರಾವರಿ ಸಲಹಾ ಸಮಿತಿ ಸಭೆ ನಡೆಸಿ ಜಿಲ್ಲೆಗೆ ಹೆಚ್ಚುವರಿ ನಿರು ಹರಿಸುವ ಭರವಸೆಯನ್ನು ಜೆಡಿಎಸ್ ಮುಖಂಡರು ನೀಡುತ್ತಿದ್ದಾರೆ. ಹೀಗಾಗಿ ಏಪ್ರಿಲ್ 18ರೊಳಗೆ ಹೇಮಾವತಿ ನೀರನ್ನು ತುಮಕೂರು ಜಿಲ್ಲೆಗೆ ಹರಿಸುವಂತೆ ಮುಖ್ಯಮಂತ್ರಿಗಳಿಗೆ ಮಾಜಿ ಪ್ರಧಾನಿ ದೇವೇಗೌಡರು ಸೂಚಿಸಬೇಕೆಂದು ಮಾಜಿ ಶಾಸಕ ಸುರೇಶ್ ಗೌಡ ಮನವಿ ಮಾಡಿದ್ದಾರೆ.
ತುಮಕೂರಿನಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಚುನಾವಣೆಯ ನಂತರ ನೀರಾವರಿ ಸಲಹಾ ಸಮಿತಿ ಸಭೆ ನಡೆಸುತ್ತೇನೆ ಎಂದು ಹೇಳುತ್ತಿರುವುದು ಎಷ್ಟು ಸರಿ. ಕನಿಷ್ಠ ಈಗಲಾದರೂ ಹೇಮಾವತಿ ಜಲಾಶಯದಿಂದ ತುಮಕೂರು ಜಿಲ್ಲೆಗೆ ನೀರು ಹರಿಸಿ. ಅದನ್ನು ಬಿಟ್ಟು ಪಲಾಯನವಾದ ಉತ್ತರಗಳನ್ನು ನೀಡಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಲ್ಲದೆ ಹೋದರೆ ತುಮಕೂರು ಜಿಲ್ಲೆಯಾದ್ಯಂತ ಉಗ್ರ ಹೋರಾಟ ನಡೆಸುವುದಾಗಿ ದೇವೇಗೌಡರಿಗೆ ಎಚ್ಚರಿಕೆ ನೀಡಿದ್ದಾರೆ.
ತುಮಕೂರು ಲೋಕಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕರಿಂದ ಹೆಗ್ಗೆರೆ ಗ್ರಾಮದಲ್ಲಿ 680 ಮತದಾರರನ್ನು ಉದ್ದೇಶಪೂರ್ವಕವಾಗಿ ಮತದಾರರ ಪಟ್ಟಿಯಿಂದ ಕೈ ಬಿಡಲಾಗಿದೆ. ಇದಕ್ಕೆ ತಪ್ಪಿತಸ್ಥರಾದ ತಾಹಶೀಲ್ದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.