ತುಮಕೂರು: ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಲೇ ಇದೆ. ಇಂದೂ ಕೂಡ 106 ಮಂದಿಗೆ ಸೋಂಕು ದೃಢಪಟ್ಟಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಡಳಿತ ಈ ಹಿಂದಿನಂತೆ ತಾಲೂಕಿನ ಕೋವಿಡ್ ಕೇರ್ ಸೆಂಟರ್ಗಳಲ್ಲಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲು ಮುಂದಾಗಿದೆ.
ಜಿಲ್ಲೆಯಲ್ಲಿ ಒಟ್ಟು 524 ಮಂದಿ ಸೋಂಕಿತರಿದ್ದಾರೆ. ಇಂದು 34 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದುವರೆಗೂ ಜಿಲ್ಲೆಯಲ್ಲಿ 266 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಜಿಲ್ಲಾ ಆಸ್ಪತ್ರೆಯ ಐಸಿಯುನಲ್ಲಿ 13 ಮಂದಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಏಪ್ರಿಲ್ 1ರ ನಂತರ ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ 45 ವರ್ಷ ಮೇಲ್ಪಟ್ಟ ಎಲ್ಲಾ ಸಾರ್ವಜನಿಕರಿಗೆ ಕೋವಿಡ್ ಲಸಿಕೆಯನ್ನು ನೀಡಲು ಜಿಲ್ಲಾಡಳಿತ ಮುಂದಾಗಿದೆ.
ಸಂಭ್ರಮಾಚರಣೆಗೆ ನಿಷೇಧಾಜ್ಞೆ ಜಾರಿಗೊಳಿಸಿದ ಜಿಲ್ಲಾಧಿಕಾರಿ
ಸೋಂಕು ಹರಡದಂತೆ ತಡೆಯುವ ನಿಟ್ಟಿನಲ್ಲಿ ಸೂಕ್ತ ಮುಂಜಾಗ್ರತಾ ಕ್ರಮವಾಗಿ ವಿಪತ್ತು ನಿರ್ವಹಣಾ ಕಾಯಿದೆ ಅಡಿ ಕೆಲ ನಿಬಂಧನೆಗಳೊಂದಿಗೆ ಜಿಲ್ಲೆಯಾದ್ಯಂತ ನಿಷೇದಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್ ಆದೇಶ ಹೊರಡಿಸಿದ್ದಾರೆ.
ಯುಗಾದಿ, ಹೋಳಿ ಹಬ್ಬ, ಷಬ್ ಎ ಬರಾತ್, ಗುಡ್ ಪ್ರೈಡೆ ಇತ್ಯಾದಿ ಹಬ್ಬಗಳ ಸಂದರ್ಭದಲ್ಲಿ ತುಮಕೂರು ಜಿಲ್ಲಾ ವ್ಯಾಪ್ತಿಯ ಯಾವುದೇ ಸಾರ್ವಜನಿಕ ಸ್ಥಳಗಳು, ಮಾರುಕಟ್ಟೆಗಳು, ಧಾರ್ಮಿಕ ಪ್ರದೇಶ ಇತ್ಯಾದಿಗಳಲ್ಲಿ ಸಭೆ ಸಮಾರಂಭ ನಿಷೇಧಿಸಲಾಗಿದೆ. ಆದೇಶ ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ ಅನ್ವಯ ಕಾನೂನು ಕ್ರಮ ಜರುಗಿಸಲಾಗುವುದು. ನಿಷೇಧಾಜ್ಞೆ ಉಲ್ಲಂಘಿಸಿದ ವ್ಯಕ್ತಿಗಳನ್ನು ಕೂಡಲೇ ಬಂಧಿಸಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಪೊಲೀಸ್ ಇಲಾಖೆಗೆ ಆದೇಶಿಸಿದ್ದಾರೆ.