ತುಮಕೂರು: ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆದ 74ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ ಧ್ವಜಾರೋಹಣ ನೆರವೇರಿಸಿದರು.
ಕೊರೊನಾ ಸೋಂಕು ಹರಡುವಿಕೆ ಭೀತಿ ಹಿನ್ನೆಲೆಯಲ್ಲಿ ಪೊಲೀಸ್ ಸಿಬ್ಬಂದಿಯನ್ನು ಹೊರತುಪಡಿಸಿ ಪಥಸಂಚಲನದಲ್ಲಿ ಶಾಲಾ ಮಕ್ಕಳಿಗೆ, ಸ್ಕೌಟ್ಸ್-ಗೈಡ್ಸ್ ಮಕ್ಕಳಿಗೆ ಅವಕಾಶ ಕಲ್ಪಿಸಿ ಕೊಟ್ಟಿರಲಿಲ್ಲ. ಅಲ್ಲದೆ ಬೆರಳೆಣಿಕೆಯಷ್ಟು ಸಾರ್ವಜನಿಕರು ಮಾತ್ರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಇನ್ನು ಕೊರೊನಾ ವಾರಿಯರ್ಸ್ಗಳನ್ನು, ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಅತೀ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಬಳಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಜೆ ಸಿ ಮಾಧುಸ್ವಾಮಿ, ಪ್ರಪಂಚದ ಪ್ರತಿಯೊಂದು ಮೂಲೆಯ ಜನರು ಬೆಂಗಳೂರಿಗೆ ಬಂದು ನೆಲೆಸಲು ಇಷ್ಟಪಡುತ್ತಿದ್ದರು. ಆದರೆ ಇಂದಿನ ಪರಿಸ್ಥಿತಿ ಸಾಕಷ್ಟು ಗೊಂದಲ ಮೂಡಿಸಿದೆ. ಹೇಗಪ್ಪ ಬೆಂಗಳೂರಿಗೆ ಹೋಗುವುದು ಎಂದು ಯೋಚನೆ ಮಾಡುವಂತಹ ಸ್ಥಿತಿ ನಿರ್ಮಾಣ ಮಾಡಿದ್ದಾರೆ. ರಾಜ್ಯದ ಯಾವುದೇ ಭಾಗದಲ್ಲಿ ಇಂತಹ ಸ್ಥಿತಿ ನಿರ್ಮಾಣ ಮಾಡಿದರೆ ಇದರಿಂದ ರಾಜ್ಯದ ಅಭಿವೃದ್ಧಿ ಏರಿಕೆಗೆ ದೊಡ್ಡ ಹೊಡೆತ ಬೀಳಲಿದೆ ಎಂದು ತಿಳಿಸಿದರು.
ತಮ್ಮ ಸ್ವಾರ್ಥಕ್ಕೆ ಇಂತಹ ಪರಿಸ್ಥಿತಿ ನಿರ್ಮಾಣ ಮಾಡಬಾರದು, ಇದು ರಾಜ್ಯದ ಅಭಿವೃದ್ಧಿಗೆ ಮಾರಕವಾಗಲಿದೆ. ಇದನ್ನು ಜನರು ಅರ್ಥಮಾಡಿಕೊಳ್ಳಬೇಕು. ಆದರೆ ಇಂತಹದ್ದನ್ನು ಸಹಿಸಿಕೊಳ್ಳದೆ ಸರ್ಕಾರ ಮುಂದಾದರೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ದೊಡ್ಡ ಪೆಟ್ಟು ಬೀಳಲಿದೆ. ನಾವೆಲ್ಲ ಪ್ರಬುದ್ಧರಾಗಬೇಕು ಜನ ನಮ್ಮನ್ನು ಗಮನಿಸುತ್ತಿದ್ದಾರೆ. ಜನಪ್ರತಿನಿಧಿಗಳು ಜವಾಬ್ದಾರಿಯಿಂದ ನಡೆದುಕೊಳ್ಳಬೇಕು ಹಾಗಂತ ದಲಿತರಿಗೆ ಬೆಂಕಿ ಇಡುವುದಲ್ಲ ಎಂದರು.
ಸಮಾರಂಭದಲ್ಲಿ ಜಿಲ್ಲಾಧಿಕಾರಿ ರಾಕೇಶ್ ಕುಮಾರ್, ಜಿಲ್ಲಾ ಪಂಚಾಯಿತಿ ಸಿಇಒ ಶೋಭಾ ಕಲ್ಯಾಣ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.