ತುಮಕೂರು: ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ರಾಜ್ಯದ ವಿವಿಧೆಡೆ ಅಸ್ತಿತ್ವಕ್ಕೆ ಬಂದಿದ್ದ ಇಂದಿರಾ ಕ್ಯಾಂಟೀನ್ ಹೆಸರು ಬದಲಾಯಿಸುವಂತೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಸಾಮಾಜಿಕ ಜಾಲತಾಣದಲ್ಲಿಅಭಿಯಾನ ಆರಂಭಿಸಿದ್ದಾರೆ.
ಇಂದಿರಾ ಕ್ಯಾಂಟೀನ್ ಮರುನಾಮಕರಣ ವಿಚಾರಕ್ಕೆ ಸಂಬಂಧಿಸಿದಂತೆ ಇಂದಿರಾ ಬದಲು ತುಮಕೂರಿನ ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಹೆಸರನ್ನು ಇಡಬೇಕೆಂದು ನೆಟ್ಟಿಗರು ಆಗ್ರಹಿಸುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳ ಮೂಲಕ ಭಕ್ತರು ಮತ್ತು ಬಿಜೆಪಿ ಕಾರ್ಯಕರ್ತರು ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತಿದ್ದಾರೆ. ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಸರ್ಕಾರ ಪತನವಾಗಿ ಬಿಜೆಪಿ ಅಧಿಕಾರದ ಗದ್ದುಗೆ ಹಿಡಿಯುತ್ತಿದ್ದಂತೆ ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ವಿಚಾರ ಮುನ್ನೆಲೆಗೆ ಬಂದಿದೆ. ತ್ರಿವಿಧ ದಾಸೋಹದ ಪರಿಕಲ್ಪನೆಗೆ ಹೆಸರಾಗಿದ್ದ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಹೆಸರು ಇಡುವಂತೆ ಆಗ್ರಹಿಸಿ ಅಭಿಯಾನ ಶುರುವಾಗಿದೆ.
ಹಿಂದಿನ ಕಾಂಗ್ರೆಸ್ ಸರ್ಕಾರದ ಜನಪ್ರಿಯ ಯೋಜನೆಗಳಲ್ಲಿ ಒಂದಾದ ಇಂದಿರಾ ಕ್ಯಾಂಟೀನ್‍ನ ಹೆಸರು ಬದಲಾವಣೆ ಮಾಡುವ ಒತ್ತಾಯದ ಕೂಗು ಜೋರಾಗುತ್ತಿದೆ. ಒಂದೆಡೆ ಬಿಜೆಪಿ ಕಾರ್ಯಕರ್ತರು ಹಾಗೂ ಬಿಜೆಪಿ ಅಭಿಮಾನಿಗಳು ಯಾರು ಕೂಡ ಇಂದಿರಾ ಕ್ಯಾಂಟೀನ್ಗೆ ಹೋಗಿ ಉಪಹಾರ ಸೇವಿಸುತ್ತಿಲ್ಲ. ಇದು ಒಂದು ರೀತಿಯ ಮುಜುಗರಕ್ಕೆ ಈಡು ಮಾಡುತ್ತಿದೆ. ಹೀಗಾಗಿ ಎಲ್ಲಾ ಪಕ್ಷದವರು, ಎಲ್ಲಾ ಸಮುದಾಯದವರು ಸರ್ಕಾರದ ಯೋಜನೆಯ ಸೌಲಭ್ಯ ಪಡೆಯುವಂತೆ ಆಗಬೇಕಾಗಿದೆ. ಹೀಗಾಗಿ ಶ್ರೀ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರ ಹೆಸರನ್ನು ಇಟ್ಟರೆ ಸೂಕ್ತ ಎಂಬ ಮಾತುಗಳು ಬಿಜೆಪಿ ಕಾರ್ಯಕರ್ತರಿಂದ ವ್ಯಕ್ತವಾಗುತ್ತಿದೆ.