ತುಮಕೂರು: ಮಾಜಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಒಡೆತನದ ತುಮಕೂರಿನ ಸಿದ್ಧಾರ್ಥ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಿನ್ನೆ ಬೆಳಗ್ಗೆಯಿಂದ ಐಟಿ ಇಲಾಖೆ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದರು.
ಇಂದು ಮಧ್ಯಾಹ್ನ ಐಟಿ ಇಲಾಖೆ ಅಧಿಕಾರಿಗಳ ಒಂದು ತಂಡ ಕಾಲೇಜಿನಿಂದ ವಾಪಸ್ ತೆರಳಿದೆ. ಮೂಲಗಳ ಪ್ರಕಾರ, ಮೂರು ತಂಡಗಳಲ್ಲಿ ಆಗಮಿಸಿದ್ದ ಐಟಿ ಅಧಿಕಾರಿಗಳು ಸಾಕಷ್ಟು ಮಾಹಿತಿಯನ್ನು ಸಂಗ್ರಹಿಸಿ ಹಾಗೂ ದಾಖಲೆಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಈ ನಡುವೆ ಕಾಲೇಜಿನ ಪ್ರಾಂಶುಪಾಲರು ಮತ್ತು ಅಕೌಂಟ್ಸ್ ಡಿಪಾರ್ಟ್ಮೆಂಟ್ ಸಿಬ್ಬಂದಿ ಸಾಕಷ್ಟು ವಿಚಾರಣೆಗೊಳಪಡಿಸಿ ಮಾಹಿತಿ ಸಂಗ್ರಹಿಸಿದ್ದಾರೆ.
ಸಿದ್ಧಾರ್ಥ ಮೆಡಿಕಲ್ ಕಾಲೇಜಿನಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿರುವ ಮತ್ತೊಂದು ತಂಡ ಸಂಜೆಯಾದರೂ ತನಿಖೆ ಮುಂದುವರಿಸಿದೆ. ಒಟ್ಟು ಆರು ಇನ್ನೋವಾ ಕಾರುಗಳಲ್ಲಿ ಬಂದಿರುವಂತಹ 25ಕ್ಕೂ ಹೆಚ್ಚು ಐಟಿ ಅಧಿಕಾರಿಗಳು ತಮಗೆ ಪೂರಕವಾಗಿ ಸಿಕ್ಕಂತಹ ಕಡತಗಳನ್ನು ವಶಕ್ಕೆ ತೆಗೆದುಕೊಳ್ಳುವ ಪ್ರಕ್ರಿಯೆ ಮುಂದುವರೆಸಿದ್ದಾರೆ. ಮೆಡಿಕಲ್ ಕಾಲೇಜಿನ ಎರಡು ಕಟ್ಟಡಗಳಲ್ಲಿ ಐಟಿ ಅಧಿಕಾರಿಗಳು ಶೋಧಕಾರ್ಯ ಮುಂದುವರಿಸಿದ್ದಾರೆ.