ತುಮಕೂರು: ಜಿಲ್ಲೆಯ ವಿಶ್ವವಿದ್ಯಾಲಯದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಅಧ್ಯಯನ ಪೀಠ ಸ್ಥಾಪನೆಗೆ ಪ್ರಯತ್ನ ಮಾಡಲಾಗುವುದು ಎಂದು ಶಾಸಕ ಜಿ.ಬಿ ಜ್ಯೋತಿಗಣೇಶ್ ತಿಳಿಸಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಮಹಾನಗರ ಪಾಲಿಕೆಯ ಸಂಯುಕ್ತಾಶ್ರಯದಲ್ಲಿ ನಗರದ ಬಾಲ ಭವನದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಾಲ್ಮೀಕಿ ರಚಿಸಿರುವ ದೇಶದ ಮಹಾಕಾವ್ಯಗಳಲ್ಲಿ ಒಂದಾದ ರಾಮಾಯಣ ಕೃತಿಗೆ 7 ಸಾವಿರ ವರ್ಷಗಳ ಇತಿಹಾಸವಿದೆ. ವಾಲ್ಮೀಕಿ ಹಾಗೂ ಇವರ ರಾಮಾಯಣ ಕೃತಿ ಬಗ್ಗೆ ಇತಿಹಾಸಕಾರರು ಇನ್ನೂ ವಿಶೇಷ ಅಧ್ಯಯನಗಳನ್ನು ನಡೆಸಬೇಕು. ಅವರು ನಡೆದು ಬಂದ ದಾರಿ ನಮ್ಮ ಮುಂದಿನ ಪೀಳಿಗೆಗೆ ಪರಿಚಯಿಸುವ ಜವಾಬ್ದಾರಿ ನಮ್ಮೆಲ್ಲರದ್ದು ಎಂದರು.
ಈ ನಿಟ್ಟಿನಲ್ಲಿ ತುಮಕೂರು ವಿವಿಯಲ್ಲಿ ವಾಲ್ಮೀಕಿ ಅಧ್ಯಯನ ಪೀಠ ಸ್ಥಾಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಅಲ್ಲದೇ ವಾಲ್ಮೀಕಿ ಸಮುದಾಯದ ಏಳಿಗೆಗೆ ಹೋರಾಡಿದ ಮಹನೀಯರ ಹಾಗೂ ಉಲ್ಲೇಖವಿರುವ ಜಿಲ್ಲೆಯಲ್ಲಿನ ಶಿಲಾನ್ಯಾಸ, ಸ್ಥಳ, ಐತಿಹ್ಯಗಳನ್ನು ಕ್ರೋಢೀಕರಿಸಿ ಪುಸ್ತಕದ ರೂಪದಲ್ಲಿ ಹೊರತರಲಾಗುವುದು ಎಂದು ಹೇಳಿದ್ರು.
ಜಿಲ್ಲಾ ಪಂಚಾಯಿತಿ ಸದಸ್ಯೆ ಶಾಂತಲಾ ರಾಜಣ್ಣ ಮಾತನಾಡಿ, ವಾಲ್ಮೀಕಿ ಸಮುದಾಯದ ಅಭಿವೃದ್ಧಿಯಲ್ಲಿ ಯಾವುದೇ ಬದಲಾವಣೆ ಕಾಣದಿರುವುದು ವಿಷಾದನೀಯ ಸಂಗತಿ. ಕೇಂದ್ರ ಸರ್ಕಾರದಲ್ಲಿ ಉದ್ಯೋಗ ಮತ್ತು ಶಿಕ್ಷಣಕ್ಕೆ ನೀಡಿರುವ ಶೇ 7.5 ಮೀಸಲಾತಿಯನ್ನು ರಾಜ್ಯದಲ್ಲಿಯೂ ಕಲ್ಪಿಸಿದಾಗ ಮಾತ್ರ ನಮ್ಮ ಸಮಾಜ ಅಭಿವೃದ್ಧಿಯಾಗುತ್ತದೆ ಎಂದರು. ಜೊತೆಗೆ ಮರಳೂರು ದಿಣ್ಣೆಯಲ್ಲಿ ನಿರ್ಮಿಸಲಾಗುತ್ತಿರುವ ವಾಲ್ಮೀಕಿ ಸಮುದಾಯ ಭವನಕ್ಕೆ ಇನ್ನೂ ಹೆಚ್ಚಿನ ಅನುದಾನದ ಅವಶ್ಯಕತೆಯಿದ್ದು ಅದನ್ನು ಸಂಸದರು ಹಾಗೂ ಶಾಸಕರು ಕಟ್ಟಡದ ನಿರ್ಮಾಣಕ್ಕೆ ಬೇಕಾದಂತಹ ಅನುದಾನವನ್ನು ಬಿಡುಗಡೆಗೊಳಿಸಬೇಕು ಎಂದು ಮನವಿ ಮಾಡಿದರು.