ತುಮಕೂರು: ಒಳಮೀಸಲಾತಿ ಜಾರಿ ಮಾಡುವ ಅಧಿಕಾರವು ಆಯಾ ರಾಜ್ಯಗಳಿಗೆ ಇದೆಯೆಂದು ಸುಪ್ರೀಂಕೋರ್ಟ್ ನ್ಯಾಯಪೀಠ ಆದೇಶ ನೀಡಿರುವುದರಿಂದ ನ್ಯಾಯಮೂರ್ತಿ ಎಜೆ ಸದಾಶಿವ ಆಯೋಗದ ಒಳಮೀಸಲಾತಿ ವರದಿಯನ್ನು ವಿಧಾನಸಭಾ ಅಧಿವೇಶನದಲ್ಲಿ ಮಂಡಿಸಿ ಮೀಸಲಾತಿ ಕಾಯಿದೆಯನ್ನು ಜಾರಿಗೊಳಿಸಬೇಕೆಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿತು.
ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶರ ಪೀಠವು ಆಗಸ್ಟ್ 27 ರಂದು ರಾಜ್ಯದ ಶಾಸನ ಸಭೆಗಳಿಗೆ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಒಳಮೀಸಲಾತಿ ವರ್ಗೀಕರಣ ಮಾಡುವ ಅಧಿಕಾರವಿದೆ ಎಂದು ತೀರ್ಪು ನೀಡಿದೆ. ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ತೀರ್ಪಿನಿಂದಾಗಿ ಒಳಮೀಸಲಾತಿ ಜಾರಿಗೊಳಿಸಲು ಕರ್ನಾಟಕ ರಾಜ್ಯ ಸರ್ಕಾರಕ್ಕೆ ಇದ್ದಂತಹ ಅಡೆತಡೆಗಳೆಲ್ಲ ಮುಕ್ತವಾಗಿವೆ.
ಹಾಗಾಗಿ ಸೆಪ್ಟಂಬರ್ ತಿಂಗಳಲ್ಲಿ ನಡೆಯುವ ರಾಜ್ಯ ವಿಧಾನಸಭಾ ಅಧಿವೇಶನದಲ್ಲಿ ನ್ಯಾಯಮೂರ್ತಿ ಎಜೆ ಸದಾಶಿವ ಆಯೋಗದ ವರದಿಯನ್ನು ಮಂಡಿಸುವ ಮೂಲಕ ಪರಿಶಿಷ್ಟ ಜಾತಿಗಳಿಗಿರುವ ಮೀಸಲಾತಿಯಲ್ಲಿ ಒಳಮೀಸಲಾತಿಯ ಕಾಯ್ದೆಯನ್ನು ಜಾರಿಗೆ ತರಬೇಕೆಂದು ಒತ್ತಾಯಿಸಲಾಯಿತು.