ತುಮಕೂರು: ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಮಧುಗಿರಿ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಜಂಟಿ ಪ್ರಚಾರ ಸಭೆಯಲ್ಲಿ ಭಾಗವಹಿಸದ ಮಾಜಿ ಶಾಸಕ ಕೆ.ಎನ್.ರಾಜಣ್ಣ,ಇಂದು ಪ್ರತ್ಯೇಕವಾಗಿ ಮಧುಗಿರಿ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ನಡೆಸಿದರು.
ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಮತ್ತು ಸಚಿವ ಶ್ರೀನಿವಾಸ್ ಜಂಟಿಯಾಗಿ ತುಮಕೂರು ಲೋಕಸಭಾ ಕ್ಷೇತ್ರದಾದ್ಯಂತ ಜೆಡಿಎಸ್ ಅಭ್ಯರ್ಥಿ ದೇವೇಗೌಡ ಪರವಾಗಿ ಪ್ರಚಾರದಲ್ಲಿ ತೊಡಗಿದ್ದಾರೆ. ಆದ್ರೆ ಯಾವದೇ ಸಭೆಯಲ್ಲೂ ಮಾಜಿ ಶಾಸಕ ಕೆ.ಎನ್.ರಾಜಣ್ಣ ಭಾಗವಹಿಸಿರಲಿಲ್ಲ. ಇಂದು ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ನಡೆಸಿ ಲೋಕಸಭೆ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಪರವಾಗಿ ಮತಯಾಚನೆ ಮಾಡಲು ಕರೆ ನೀಡಿದ್ದಾರೆ.
ಈ ವೇಳೆ ಮಾತನಾಡಿದ ಕೆ.ಎನ್.ರಾಜಣ್ಣ, ಜೆಡಿಎಸ್ ಪಕ್ಷದವರು ಮೈತ್ರಿ ಧರ್ಮ ಪಾಲನೆ ಮಾಡಿಲ್ಲ ಅಂದ್ರೆ ನಾವು ಕೂಡ ಅದೇ ರೀತಿ ನಡೆದುಕೊಂಡರೆ, ಅವರಿಗೂ ನಮಗೂ ಯಾವುದೇ ವ್ಯತ್ಯಾಸವಿರುವುದಿಲ್ಲ. ನಾವು ಮೈತ್ರಿ ಅಭ್ಯರ್ಥಿಯ ಪರವಾಗಿ ಕೆಲಸ ಮಾಡಬೇಕಾಗಿದೆ ಎಂದು ಹೇಳಿದರು.
ಸಂಸದ ಮುದ್ದಹನುಮೇಗೌಡರನ್ನು ಕಾಂಗ್ರೆಸ್ ಮುಖಂಡರು ಯಾರು ಕೂಡ ಕಾಂಗ್ರೆಸ್-ಜೆಡಿಎಸ್ ಪಕ್ಷದ ಜಂಟಿ ಪ್ರಚಾರ ಸಭೆಗೆ ಕರೆಯುತ್ತಿಲ್ಲ. ಹೀಗಾಗಿ ಅವರು ಮನ ನೊಂದಿದ್ದಾರೆ. ಏಪ್ರಿಲ್ 10ರಂದು ಮಧುಗಿರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಲಿದ್ದಾರೆ. ಅಲ್ಲಿಗೆ ಸಂಸದ ಮುದ್ದಹನುಮೇಗೌಡರು ಬರುತ್ತಾರೆ. ಸಿದ್ದರಾಮಯ್ಯ ಅವರು ಹೇಳಿದಂತೆ ನಾನು ನಡೆದುಕೊಳ್ಳುತ್ತೇನೆ. ಹೀಗಾಗಿ ಅವರು ನಡೆಸಲಿರುವ ಸಭೆಗೆ ಎಲ್ಲರೂ ಭಾಗವಹಿಸುತ್ತೇವೆ ಎಂದು ತಿಳಿಸಿದರು.
ರಾಜ್ಯದಲ್ಲಿ ಮತಗಳ ವಿಭಜನೆ ಮಾಡುವ ಶಕ್ತಿ ಇರುವುದು ಕೇವಲ ದೇವೇಗೌಡ, ಯಡಿಯೂರಪ್ಪ ಮತ್ತು ಸಿದ್ದರಾಮಯ್ಯ ಅವರಿಗೆ ಮಾತ್ರ ಎಂದರು.