ತುಮಕೂರು: ಡಿ.10 ರಂದು ನಡೆಯಲಿರುವ ವಿಧಾನಪರಿಷತ್ ಚುನಾವಣೆಗೆ ಮೂರು ಪಕ್ಷಗಳಿಂದ ಪ್ರಬಲ ಸ್ಪರ್ಧಿಗಳು ಕಣದಲ್ಲಿದ್ದು, ತ್ರಿಕೋನ ಪೈಪೋಟಿ ಏರ್ಪಟ್ಟಿದೆ.
ಕಾಂಗ್ರೆಸ್ನಿಂದ ಆರ್.ರಾಜೇಂದ್ರ, ಜೆಡಿಎಸ್ನಿಂದ ಅನಿಲ್ ಕುಮಾರ್, ಬಿಜೆಪಿಯಿಂದ ಎನ್.ಲೋಕೇಶ್ ಸ್ಪರ್ಧೆಗಿಳಿದಿದ್ದು, ಜಿದ್ದಾಜಿದ್ದಿನ ಹೋರಾಟಕ್ಕೆ ಸಜ್ಜಾಗಿದ್ದಾರೆ. ಮೂವರು ಅಭ್ಯರ್ಥಿಗಳು ಒಂದಿಲ್ಲೊಂದು ರೀತಿಯಲ್ಲಿ ಪ್ರಬಲರಾಗಿದ್ದು, ಚುನಾವಣೆಯಲ್ಲಿ ಗೆದ್ದೇ ತಿರಬೇಕೆಂಬ ಹುಮ್ಮಸ್ಸಿನಲ್ಲಿದ್ದಾರೆ.
ಪಕ್ಷ ಮತ್ತು ಅಭ್ಯರ್ಥಿಗಳ ವೈಯಕ್ತಿಕ ಬಲಾಬಲ ಹೀಗಿದೆ:
ಕಾಂಗ್ರೆಸ್ ಅಭ್ಯರ್ಥಿ ಆರ್.ರಾಜೇಂದ್ರ ಕಳೆದ ಬಾರಿಯ ವಿಧಾನಪರಿಷತ್ ಚುನಾವಣೆಯಲ್ಲಿ ಅತ್ಯಲ್ಪ ಮತಗಳಿಂದ ಪರಾಭವಗೊಂಡಿದ್ದರು. ಅಲ್ಲದೇ ಕ್ಷೇತ್ರದಲ್ಲಿ ಚಿರಪರಿಚಿತರಾಗಿದ್ದು, ತಂದೆ ಕೆ.ಎನ್.ರಾಜಣ್ಣ ವರ್ಚಸ್ಸು ಇವರ ಗೆಲುವಿಗೆ ಪ್ಲಸ್ ಪಾಯಿಂಟ್ ಆಗಲಿದೆ. ಇದರ ಜೊತೆಗೆ ಕ್ರಬ್ಕೋ ಮತ್ತು ಡಿಸಿಸಿ ಬ್ಯಾಂಕ್ನ ನಿರ್ದೇಶಕರಾಗಿದ್ದು, ತಮ್ಮದೇ ಆದ ವೈಯಕ್ತಿಕ ನೆಲಗಟ್ಟಿನಲ್ಲಿ ಚುನಾವಣಾ ಅಖಾಡದಲ್ಲಿದ್ದಾರೆ.
ಬಿಜೆಪಿ ಅಭ್ಯರ್ಥಿ ಎನ್.ಲೋಕೇಶ್.. ಮೂಲತಃ ಜಿಲ್ಲೆಯ ಕೊರಟಗೆರೆ ತಾಲೂಕಿನ ವಡ್ಡಗೆರೆ ಗ್ರಾಮದವರು. ಈ ಹಿಂದೆ ಬೆಂಗಳೂರಿಗೆ ತೆರಳಿ ಅಲ್ಲಿ ರಾಜಕೀಯ ಭವಿಷ್ಯ ಕಂಡುಕೊಂಡಿದ್ದಾರೆ. ಆದರೆ ವಾಪಸ್ ತುಮಕೂರು ಜಿಲ್ಲೆಗೆ ಆಗಮಿಸಿದ್ದು, ಹೊಸಬರು ಎಂಬ ಹಣೆಪಟ್ಟಿ ಕಟ್ಟಿಕೊಂಡಿದ್ದಾರೆ. ಒಂದು ದಶಕದಿಂದ ಬಿಜೆಪಿಯಲ್ಲಿ ಗುರುತಿಸಿಕೊಂಡು ಬೆಂಗಳೂರಿನಲ್ಲಿ ಕಾರ್ಪೊರೇಟರ್ ಆಗಿದ್ದರು. ಅಲ್ಲದೆ ಪಕ್ಷದ ವಿವಿಧ ಪದಾಧಿಕಾರಿ ಹುದ್ದೆಯಲ್ಲಿ ಕೆಲಸ ಮಾಡಿದ್ದು, ಪಕ್ಷವು ನಿಷ್ಠಾವಂತ ಕಾರ್ಯಕರ್ತನಾಗಿ ಗುರುತಿಸಿಕೊಂಡಿದ್ದಾರೆ. ಇವರ ಗೆಲುವಿಗಾಗಿ ಸಚಿವ ಮಾಧುಸ್ವಾಮಿ, ಬಿ.ಸಿ. ನಾಗೇಶ್ ಟೊಂಕ ಕಟ್ಟಿ ನಿಂತಿದ್ದಾರೆ.
ಜೆಡಿಎಸ್ ಪಕ್ಷದಿಂದ ಅನಿಲ್ ಕುಮಾರ್ ಕಣದಲ್ಲಿದ್ದು, ಕೆಎಎಸ್ ಅಧಿಕಾರಿ ಹುದ್ದೆಗೆ ರಾಜೀನಾಮೆ ನೀಡಿ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಎಸ್ಟಿ ಸಮುದಾಯಕ್ಕೆ ಸೇರಿದವರಾಗಿದ್ದು. ಇವರ ತಂದೆ ರಾಮಾಂಜನಪ್ಪ ಕೂಡ ತುಮಕೂರು ಗ್ರಾಮಾಂತರ ವಿಧಾನಸಭೆ ಕ್ಷೇತ್ರದಲ್ಲಿ ಜಿ.ಪಂ. ಸದಸ್ಯರಾಗಿದ್ದವರು. ಹೀಗಾಗಿ ರಾಜಕೀಯ ಹಿನ್ನೆಲೆ ಹೊಂದಿರುವ ಅನಿಲ್ಗೆ ಇದು ವರದಾನವಾಗಲಿದೆ ಎನ್ನಲಾಗುತ್ತಿದೆ.
ಕಳೆದ ಲೋಕಸಭೆ ಚುನಾವಣೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಸೋಲಿಗೆ ರಾಜಣ್ಣ ಕಾರಣ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೆ ದೇವೇಗೌಡರು ಸೋಲಿನ ನಂತರ ತೀವ್ರ ಆರೋಗ್ಯ ಹದಗೆಟ್ಟಿದೆ ಎಂದು ನೊಂದು ನುಡಿದದ್ದರು. ಇದು ಜೆಡಿಎಸ್ ಪರವಾದ ಮತದಾರರಲ್ಲಿ ಆಕ್ರೋಶ ಹೆಚ್ಚಾಗಲು ಕಾರಣವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ರಾಜೇಂದ್ರ ಅವರ ವೇಗಕ್ಕೆ ಮುಳುವಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.
ಇನ್ನೊಂದೆಡೆ ದೇವೇಗೌಡರ ಕುಟುಂಬವು ಜಿಲ್ಲೆಗೆ ಹೇಮಾವತಿ ನೀರು ಹರಿಸುವಲ್ಲಿ ತಾರತಮ್ಯ ಎಸಗಿದೆ. ಇದು ದೇವೇಗೌಡರ ಸೋಲಿಗೆ ಕಾರಣವಾಗಿದೆ. ಅಲ್ಲದೆ ವಿಧಾನಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಸೋಲಿಗೆ ಕಾರಣವಾಗಲಿದೆ ಎಂಬುದು ಕಾಂಗ್ರೆಸ್ ಮುಖಂಡರ ಅಭಿಪ್ರಾಯವಾಗಿದೆ.
ಇದನ್ನೂ ಓದಿ: ಕೊರೊನಾ ಕ್ಲಸ್ಟರ್ ಭೀತಿ.. ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಬ್ರೇಕ್ ಹಾಕಲು ಸರ್ಕಾರದ ಸಲಹೆ