ತುಮಕೂರು: ಗುಬ್ಬಿ ತಾಲೂಕಿನ ಮಣಕಿಕುಪ್ಪೆ ಗ್ರಾಮದಲ್ಲಿ ಬಾಲಕನೊಬ್ಬನನ್ನು ಚಿರತೆ ಕೊಂದು ಹಾಕಿದ್ದು, ಅರಣ್ಯ ಇಲಾಖೆ ಬೇಜವಾಬ್ದಾರಿ ತನವೇ ಕಾರಣ ಎಂದು ಆರೋಪಿಸಿ ಗ್ರಾಮಸ್ಥರು ಧಿಡೀರನೆ ಪ್ರತಿಭಟನೆ ನಡೆಸಿದರು.
ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಸುಮಾರು 2 ಗಂಟೆಗಳ ಕಾಲ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಇದರಿಂದಾಗಿ ಕೆಲಕಾಲ ವಾಹನ ಸವಾರರಿಗೆ ತೊಂದರೆ ಉಂಟಾಯಿತು. ಪ್ರತಿಭಟನೆ ಹಿಂಪಡೆಯುವಂತೆ ಪೊಲೀಸರು ಹಲವು ಬಾರಿ ಮನವಿ ಮಾಡಿಕೊಂಡರೂ ಇದಕ್ಕೆ ಪ್ರತಿಭಟನಕಾರರು ಒಪ್ಪಲಿಲ್ಲ. ಹೀಗಾಗಿ, ಪೊಲೀಸರು ಪ್ರತಿಭಟನಾಕಾರರನ್ನು ಚದುರಿಸಲು ಲಘು ಲಾಠಿ ಪ್ರಹಾರ ನಡೆಸಿದರು.