ತುಮಕೂರು: ಹಲವು ದಿನಗಳಿಂದ ಗ್ರಾಮಸ್ಥರ ನಿದ್ದೆಗೆಡಿಸಿದ್ದ ನಾಲ್ಕು ಚಿರತೆಗಳ ಪೈಕಿ ಒಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿನಲ್ಲಿ ಸೆರೆಯಾಗಿದೆ.
ತುಮಕೂರು ತಾಲೂಕಿನ ಬಡೇಸಾಬ್ ಪಾಳ್ಯದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆ ಹಿಡಿಯಲು ಬೋನು ಇರಿಸಿದ್ದರು. ಕಳೆದ ಒಂದು ತಿಂಗಳಿನಿಂದ ಚಿರತೆ ಸೆರೆ ಹಿಡಿದು ಬೇರೆಡೆ ಸಾಗಿಸಲು ಅರಣ್ಯ ಇಲಾಖೆ ಅಧಿಕಾರಿಗಳು ಹರಸಾಹಸ ಪಟ್ಟಿದ್ದರೂ ಸಾಧ್ಯವಾಗಿರಲಿಲ್ಲ. ತುಮಕೂರು, ಕುಣಿಗಲ್ ಹಾಗೂ ಗುಬ್ಬಿ ತಾಲೂಕಿಗೆ ಹೊಂದಿಕೊಂಡಂತಹ ಪ್ರದೇಶಗಳಲ್ಲಿ ಚಿರತೆಗಳು ಈವರೆಗೆ ನಾಲ್ವರನ್ನು ಬಲಿ ಪಡೆದಿವೆ. ಇದರಿಂದ ಜನ ರೊಚ್ಚಿಗೆದ್ದಿದ್ದಾರೆ.
ಸದ್ಯ ಒಂದು ಚಿರತೆ ಬೋನಿನಲ್ಲಿ ಸೆರೆಯಾಗಿದೆ. ಚಿರತೆ ಬೋನಿಗೆ ಬಿದ್ದ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಸಾರ್ವಜನಿಕರು ಚಿರತೆಯನ್ನು ಹೊಡೆದು ಹಾಕುವಂತೆ ಆಕ್ರೋಶ ವ್ಯಕ್ತಪಡಿಸಿದರು.