ತುಮಕೂರು: ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಹೋಬಳಿಯ ವೀರಾಪುರ ಗ್ರಾಮದ ಸುತ್ತಮುತ್ತಲ ಪ್ರದೇಶದಲ್ಲಿ ಹಲವು ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಇಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿದೆ. ಸುಮಾರು ಒಂದು ವರ್ಷದ ಗಂಡು ಚಿರತೆ ಇದಾಗಿದ್ದು, ಅನೇಕ ದಿನಗಳಿಂದ ಹಸು, ಮೇಕೆಗಳ ಮೇಲೆ ದಾಳಿ ನಡೆಸಿ ರೈತರಿಗೆ ಸಾಕಷ್ಟು ನಷ್ಟ ಉಂಟುಮಾಡಿತ್ತು.
ಚಿರತೆ ಹಾವಳಿಯಿಂದ ಬೇಸತ್ತಿದ್ದ ವೀರಾಪುರ ಸುತ್ತಮುತ್ತಲಿನ ಜನ ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಒತ್ತಾಯಿಸಿದ್ದರು. ಹೀಗಾಗಿ ಎಚ್ಚೆತ್ತುಕೊಂಡಿದ್ದ ಅರಣ್ಯ ಇಲಾಖೆ ಬೋನಿನ ಒಳಗೆ ನಾಯಿಯನ್ನು ಇಟ್ಟು ಚಿರತೆ ಹಿಡಿಯುವಲ್ಲಿ ಯಶಸ್ವಿಯಾಗಿದೆ. ವೀರಾಪುರ ಗ್ರಾಮದ ರಾಮೇಗೌಡ ಎಂಬುವರ ಜಮೀನಿನಲ್ಲಿ ಇಟ್ಟಿದ್ದ ಬೋನಿನಲ್ಲಿ ಚಿರತೆ ಸೆರೆಯಾಗಿದೆ.
ಅರಣ್ಯ ಇಲಾಖೆ ಅಧಿಕಾರಿಗಳಾದ ರವಿ ಹಾಗೂ ಮುತ್ತುರಾಜ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಚಿರತೆಯನ್ನು ಬನ್ನೇರುಘಟ್ಟ ವನ್ಯಧಾಮಕ್ಕೆ ಬಿಡಲು ತಯಾರಿ ಮಾಡಿಕೊಳ್ಳಲಾಗಿದೆ.
ಇದನ್ನೂ ಓದಿ: ದಾವಣಗೆರೆಯಲ್ಲಿ ಮಹಿಳೆಯನ್ನು ಬಲಿ ಪಡೆದು ಆತಂಕ ಮೂಡಿಸಿದ್ದ ಚಿರತೆ ಸೆರೆ - ವಿಡಿಯೋ