ತುಮಕೂರು: ತುಮಕೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಸ್ಲಂಗಳಲ್ಲಿ ಜನರ ಆರೋಗ್ಯದ ದೃಷ್ಟಿಯಿಂದ ಪೂರಕ ವೈದ್ಯಕೀಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ರಾಷ್ಟ್ರೀಯ ಆರೋಗ್ಯ ಮಿಷನ್ ಅಡಿ, ತುಮಕೂರು ನಗರದ ಮೂರು ಸ್ಲಂಗಳ ಬಳಿ ಪ್ರಾಥಮಿಕ ಚಿಕಿತ್ಸಾ ಘಟಕಗಳನ್ನು ತೆರೆಯಲಾಗಿದೆ. ಈ ಪ್ರದೇಶಗಳಲ್ಲಿ ವಾಸಿಸುವ ಜನರು ಅತಿ ಹೆಚ್ಚು ಅನಾರೋಗ್ಯ ಪೀಡಿತರಾಗಿ ತೊಳಲಾಡುತ್ತಿರುತ್ತಾರೆ. ಹೀಗಾಗಿ ತುಮಕೂರು ಮಹಾನಗರ ಪಾಲಿಕೆಯು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಅಲ್ಲಿನ ಜನರ ಆರೋಗ್ಯದ ದೃಷ್ಟಿಯಿಂದ ಕ್ರಮ ಕೈಗೊಳ್ಳುತ್ತಿದೆ. ಅಲ್ಲದೆ ಹೆಚ್ಚುವರಿಯಾಗಿ 4 ಕಡೆ ಪ್ರಾಥಮಿಕ ಚಿಕಿತ್ಸಾ ಕೇಂದ್ರಗಳನ್ನು ತೆರೆದು ಚಿಕಿತ್ಸೆ ನೀಡಲಾಗುತ್ತಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತೆಗೆದುಕೊಳ್ಳುವಂತಹ ಚಿಕಿತ್ಸೆ ಸೌಲಭ್ಯಗಳಿಗೆ ಮುಖ್ಯವಾಗಿ ಕೊರೊನಾ ಸೋಂಕಿತರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರನ್ನು ಪತ್ತೆ ಹಚ್ಚುವ ಕಾರ್ಯದಲ್ಲಿ ಪಾಲಿಕೆ ಸಿಬ್ಬಂದಿ ಕೈಜೋಡಿಸಿದ್ದಾರೆ. ಅಲ್ಲ ಸ್ಲಂಗಳಲ್ಲಿ ಮಲೇರಿಯಾ, ಡೆಂಗ್ಯೂ ಕಾಯಿಲೆಗಳು ಪತ್ತೆಯಾದ ಸಂದರ್ಭದಲ್ಲಿ ಆರೋಗ್ಯ ಇಲಾಖೆಗೆ ಪಾಲಿಕೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಂಪೂರ್ಣ ಸಹಕಾರ ನೀಡಿ ರೋಗ ತಡೆಗಟ್ಟಲು ಕ್ರಮ ಕೈಗೊಳ್ಳಲಾಗುತ್ತಿದೆ.
ಒಟ್ಟಾರೆ ತುಮಕೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಪಾಲಿಕೆಯು ಸ್ಲಂಗಳಲ್ಲಿನ ಜನರ ಆರೋಗ್ಯದ ದೃಷ್ಟಿಯಿಂದ ಪೂರಕ ಸಹಕಾರ ನೀಡುತ್ತಿದೆ.