ತುಮಕೂರು: ಸ್ಮಾರ್ಟ್ ಸಿಟಿ ಕಾಮಗಾರಿಯಲ್ಲಿ ವಿಳಂಬ ಧೋರಣೆ ಮತ್ತು ಉತ್ತಮವಾದ ಕಾಮಗಾರಿ ನಡೆಯುತ್ತಿಲ್ಲ ಎಂಬ ಕೂಗು ಕೇಳಿ ಬರುತ್ತಿದ್ದು, ಕಳಪೆ ಕಾಮಗಾರಿ ನಡೆಸಿದ ಅಧಿಕಾರಿಗಳ ವಿರುದ್ಧ ಮುಲಾಜಿಲ್ಲದೆ ಕ್ರಮ ಜರುಗಿಸಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತುಮಕೂರು ನಗರಕ್ಕೆ ಕಾಯಕಲ್ಪ ನೀಡುವ ನಿಟ್ಟಿನಲ್ಲಿ ಇಂದು ತುಮಕೂರು ನಗರಕ್ಕೆ ಆಗಮಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ತುಮಕೂರು ನಗರದಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಕಾಮಗಾರಿ ತುರ್ತಾಗಿ ನಡೆಯುವ ಜೊತೆಗೆ ಆದಷ್ಟು ಬೇಗ ಪೂರ್ಣಗೊಳ್ಳಬೇಕು. ಈ ಕಾಮಗಾರಿಗಳಿಂದ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗಬಾರದು. ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮ ವಹಿಸಬೇಕು ಎಂದರು.
ಇನ್ನು ಬೇಸಿಗೆ ಪ್ರಾರಂಭವಾಗುತ್ತಿದ್ದು, ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ಸಮರ್ಪಕವಾಗಿ ಸಾರ್ವಜನಿಕರಿಗೆ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದೆ. ತುಮಕೂರು ಸುತ್ತಮುತ್ತಲ ಭಾಗದಲ್ಲಿ ಭೂಮಿಯನ್ನು ಗುರುತಿಸಲಾಗಿದ್ದು, ಅದರಲ್ಲಿ ಅರ್ಧ ಭಾಗದ ರೈತರಿಗೆ, ಉಳಿದ ಅರ್ಧ ಭಾಗ ಅಭಿವೃದ್ಧಿಗೆ ತೆಗೆದುಕೊಳ್ಳಲಾಗುವುದು. ಸುಮಾರು ಆರು ಸಾವಿರ ನಿವೇಶನಗಳನ್ನು ನಿರ್ಮಿಸುವ ಮೂಲಕ ತುಮಕೂರು ನಗರ ಅತ್ಯುತ್ತಮ ಸಿಟಿಯಾಗಿ ಬೆಳೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸ್ಮಾರ್ಟ್ ಸಿಟಿ ಕಾಮಗಾರಿಯಲ್ಲಿ ವಿಳಂಬ ಧೋರಣೆ ಮತ್ತು ಉತ್ತಮವಾದ ಕಾಮಗಾರಿ ನಡೆಯುತ್ತಿಲ್ಲ ಎಂಬ ಕೂಗು ಕೇಳಿ ಬರುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಕಳಪೆ ಕಾಮಗಾರಿ ನಡೆಸಿದ ಅಧಿಕಾರಿಗಳ ವಿರುದ್ಧ ಮುಲಾಜಿಲ್ಲದೆ ಕ್ರಮ ಜರುಗಿಸಲಾಗುವುದು. ತುಮಕೂರು ನಗರದ ಅಭಿವೃದ್ಧಿ ನನಗೆ ಮುಖ್ಯ. ನಗರದಲ್ಲಿ ಅನೇಕ ಕಾಮಗಾರಿಗಳು ನಡೆಯುತ್ತಿದ್ದು, ಸಾರ್ವಜನಿಕರಿಗೆ ಇದರಿಂದ ಯಾವುದೇ ತೊಂದರೆಯಾಗಬಾರದು ಎಂದರು. ಸಂಸದರು 180 ಕೋಟಿ ಅನುದಾನವನ್ನು ತುಮಕೂರು ನಗರದ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ಬಿಡುಗಡೆಗೊಳಿಸಿದ್ದಾರೆ. ಆದರೆ ಸಮರ್ಪಕವಾಗಿ ಈ ಹಣ ಖರ್ಚಾಗಿಲ್ಲ ಎಂಬ ನೋವು ಅವರಲ್ಲಿ ಕಾಡುತ್ತಿದೆ ಎಂದರು.
ಭ್ರಷ್ಟ ಅಧಿಕಾರಿಗಳು ಮಹಾನಗರ ಪಾಲಿಕೆಯಲ್ಲಿ ಹೆಚ್ಚಾಗಿದ್ದಾರೆ. ಇವರ ವಿರುದ್ಧ ಏನು ಕ್ರಮ ಕೈಗೊಳ್ಳುತ್ತೀರಿ ಎಂದು ವರದಿಗಾರರೊಬ್ಬರು ಪ್ರಶ್ನಿಸಿದ್ದಕ್ಕೆ, ದಾಖಲೆಗಳ ಮೂಲಕ ಜಿಲ್ಲಾಧಿಕಾರಿಯವರಿಗೆ ಮತ್ತು ಮಹಾನಗರ ಪಾಲಿಕೆಯ ಆಯುಕ್ತರಿಗೆ ದೂರು ಸಲ್ಲಿಸಿ. ನಂತರ ಅವರ ಮೇಲಿನ ದೂರು ಸಾಬೀತಾದರೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದರು.
ನಗರದಲ್ಲಿರುವ ಇಂದಿರಾ ಕ್ಯಾಂಟೀನ್ ಬಗ್ಗೆ ದೂರುಗಳು ಬಂದಿದ್ದು, ಆಹಾರ ನೀಡುವ ಗುತ್ತಿಗೆದಾರರಿಗೆ ನೀಡಬೇಕಿದ್ದ ಹಣವನ್ನು ತಡೆ ಹಿಡಿಯಲಾಗಿದೆ. ಅಧಿಕಾರಿಗಳಿಗೆ ಈ ಬಗ್ಗೆ ಸೂಚನೆ ನೀಡಿದ್ದೇನೆ. ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದರು.