ತುಮಕೂರು: ಕೇಂದ್ರದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರ ಬರಬೇಕಾದರೆ ಗ್ರಾಮ ಪಂಚಾಯಿತಿಗಳಲ್ಲಿ ಅಧಿಕಾರ ಹಿಡಿದು ಅಭಿವೃದ್ಧಿ ಮಾಡಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು.
ತುಮಕೂರಿನ ತಿಪಟೂರಿನಲ್ಲಿ ನಡೆದ ಗ್ರಾಮ ಸ್ವರಾಜ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ದೇಶಭಕ್ತನಾಗಿ ಗ್ರಾಮ ಪಂಚಾಯಿತಿಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಯನ್ನು ಗೆಲ್ಲಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕಿದೆ. ಈ ರೀತಿಯಾಗಿ ಕೆಲಸ ಮಾಡಿದರೇ ಮಾತ್ರ ದೇಶಭಕ್ತರ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದರು.
ಕೇಂದ್ರ ಸರ್ಕಾರದಿಂದ ಗ್ರಾಮ ಪಂಚಾಯಿತಿಗಳಿಗೆ ಅಭಿವೃದ್ಧಿ ದೃಷ್ಟಿಯಿಂದ ಸಾಕಷ್ಟು ಅನುದಾನ ಬರುತ್ತಿದೆ. ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸಲು ಅಭ್ಯರ್ಥಿಗಳು ಹಿಂದೇಟು ಹಾಕುತ್ತಿದ್ದಾರೆ. ಬದಲಾಗಿ ಗ್ರಾಮ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸಲು ಆಸಕ್ತಿ ತೋರುತ್ತಿದ್ದಾರೆ. ಅಭಿವೃದ್ಧಿಯ ದೃಷ್ಟಿಯಿಂದ ಸಾಕಷ್ಟು ಕೆಲಸ ಮಾಡಬಹುದು ಎಂಬ ಮನಸ್ಥಿತಿ ಹೊಂದಿದ್ದಾರೆ ಎಂದು ತಿಳಿಸಿದರು.
ಗ್ರಾಮ ಪಂಚಾಯಿತಿ ಚುನಾವಣೆ ಘೋಷಣೆಯಾದ ನಂತರ ಕಾಂಗ್ರೆಸ್ ಪಕ್ಷದ ಮುಖಂಡರು ಸುದ್ದಿಗೋಷ್ಠಿ ನಡೆಸಿ ಕಣ್ಮರೆಯಾಗಿದ್ದಾರೆ. ಆದರೆ, ಬಿಜೆಪಿ ಚುನಾವಣೆಗೆ ಕಾರ್ಯಕರ್ತರನ್ನು ಸಜ್ಜುಗೊಳಿಸಿ ಗ್ರಾಮಮಟ್ಟದ ಅಭಿವೃದ್ಧಿಯತ್ತ ಚಿಂತನೆ ನಡೆಸುತ್ತಿದೆ ಎಂದು ಹೇಳಿದರು.
ಸಮಾವೇಶದಲ್ಲಿ ಸಚಿವ ಮಾಧುಸ್ವಾಮಿ, ಸಂಸದ ನಾರಾಯಣಸ್ವಾಮಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸುರೇಶ ಗೌಡ ಸೇರಿದಂತೆ ಮತ್ತಿತರ ಹಾಜರಿದ್ದರು.