ಹಾಸನ: ಜೆಎನ್ಯು ವಿಶ್ವವಿದ್ಯಾಲಯದ ಪ್ರಾಧ್ಯಾಪಕರ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿರುವ ಎಬಿವಿಪಿ ಗೂಂಡಾಗಳನ್ನು ಬಂಧಿಸಿ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಎನ್ಎಸ್ಯುಐ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು. ಬಳಿಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಹಾಸ್ಟೆಲ್ ಶುಲ್ಕ ಹೆಚ್ಚಳ, ಪೌರತ್ವ (ತಿದ್ದುಪಡಿ) ಕಾಯ್ದೆ, ರಾಷ್ಟ್ರೀಯ ಪೌರತ್ವ ನೋಂದಣಿ ವಿರೋಧಿಸಿ ಜೆಎನ್ಯು ವಿಶ್ವವಿದ್ಯಾಲಯದಲ್ಲಿ ಎರಡು ತಿಂಗಳಿಂದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದರು. ಆ ವಿದ್ಯಾರ್ಥಿಗಳನ್ನೇ ಗುರಿಯಾಗಿಸಿಕೊಂಡು ಅವರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಎಬಿವಿಪಿ ಸಂಘಟನೆ ಮುಖಂಡರು, ಕಾರ್ಯಕರ್ತರು, ಗೂಂಡಾಗಳಂತೆ ವರ್ತಿಸುತ್ತಿದ್ದಾರೆ. ಇದಕ್ಕೆ ಬಿಜೆಪಿ ಮತ್ತು ಸಂಘ ಪರಿವಾರದ ಬೆಂಬಲವಿದೆ.
ತೀವ್ರ ಗಾಯಗೊಂಡಿರುವ ಜೆಎನ್ಯು ವಿದ್ಯಾರ್ಥಿ ಸಂಘಟನೆ ಅಧ್ಯಕ್ಷೆ ಆಯಿಷಿ ಘೋಷ್ಗೆ ಸೂಕ್ತ ಚಿಕಿತ್ಸೆ ನೀಡಬೇಕು. ಘಟನೆ ಕುರಿತು ಉನ್ನತ ಮಟ್ಟದ ತನಿಖೆ ಆಗಬೇಕು ಎಂದು ಒತ್ತಾಯಿಸಿದರು.