ತುಮಕೂರು: ನವೆಂಬರ್ 14ರಂದು 66ನೇ ವರ್ಷದ ರಾಜ್ಯಮಟ್ಟದ ಸಹಕಾರ ಸಪ್ತಾಹ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಅನೇಕರು ಭಾಗವಹಿಸಲಿದ್ದಾರೆ ಎಂದು ರಾಜ್ಯ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಿರುವ ಆಯುಷ್ಮಾನ್ ಭಾರತ್, ಆರೋಗ್ಯ ಕರ್ನಾಟಕ ಯೋಜನೆಯಿಂದ ರೈತರಿಗೆ ಹೆಚ್ಚು ಅನುಕೂಲವಾಗುತ್ತಿದೆ. ಅಂತೆಯೇ ಯಶಸ್ವಿನಿ ಯೋಜನೆ ಪುನರ್ ಪ್ರತಿಷ್ಠಾಪನೆ ಮಾಡುವ ವಿಚಾರವನ್ನು ಸಿಎಂ ಗಮನಕ್ಕೆ ತಂದಿದ್ದೇವೆ. ನವಂಬರ್ 14ರಂದು ಯಶಸ್ವಿನಿ ಯೋಜನೆಯನ್ನು ಸಿಎಂ ಪುನರ್ ಘೋಷಣೆ ಮಾಡುವ ಭರವಸೆಯಿದೆ. ಅಷ್ಟೇ ಅಲ್ಲದೆ, ಹೈನುಗಾರಿಕೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ತುಮಕೂರಿನಲ್ಲಿ ಮೆಗಾ ಡೈರಿ ಸ್ಥಾಪನೆಗೂ ಒಪ್ಪಿಗೆ ನೀಡುವ ಭರವಸೆ ಇದೆ ಎಂದರು.
ಇದೇ ವೇಳೆ ಸರ್ಕಾರದ ಬೊಕ್ಕಸದಲ್ಲಿ ಹಣವಿಲ್ಲ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಸರ್ಕಾರದಲ್ಲಿ ದುಡ್ಡಿಲ್ಲ ಅಂತ ಯಾರು ಹೇಳಿದ್ದು? ನೆರೆ ಪರಿಹಾರವನ್ನು ಸರ್ಕಾರ ಸರಿಯಾಗಿ ನಿಭಾಯಿಸುತ್ತಿದೆ. ವಿವಿಧ ಮೂಲಗಳಿಂದ ಸರ್ಕಾರದ ಬೊಕ್ಕಸಕ್ಕೆ ಹಣ ಬರುತ್ತಿದೆ. ಕೇಂದ್ರ ಸರ್ಕಾರದಿಂದಲೂ ಹಣ ಬರುತ್ತಿದೆ ಎಂದರು.