ತುಮಕೂರು: ಜಿಲ್ಲೆಯಲ್ಲಿಂದು ಮಹಾಮಾರಿ ಕೊರೊನಾ ಸೋಂಕಿಗೆ 53 ವರ್ಷದ ವ್ಯಕ್ತಿಯೊಬ್ಬರು ಬಲಿಯಾಗಿದ್ದು, ಇದುವರೆಗೂ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಜೊತೆಗೆ ಇಂದು ಹೊಸದಾಗಿ 27 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.
ಕೊರಟಗೆರೆ ತಾಲೂಕಿನ ಮೃತ ವ್ಯಕ್ತಿಯು ಜುಲೈ 7 ರಂದು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಇವರು ಜ್ವರ, ಕೆಮ್ಮು, ನೆಗಡಿ ಯಿಂದ ಬಳಲುತ್ತಿದ್ದರು. ಸದ್ಯ ಸೋಂಕಿಗೆ ಬಲಿಯಾಗಿದ್ದು, ಇವರ ಪ್ರಾಥಮಿಕ ಸಂಪರ್ಕದಲ್ಲಿದ್ದ ಐವರನ್ನು ಈಗಾಗಲೇ ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗಿದೆ.
ತಿಪಟೂರು ನಗರ ಪೊಲೀಸ್ ಠಾಣೆಯಲ್ಲಿ ಸಿಬ್ಬಂದಿಯೊಬ್ಬರಿಗೆ ಸೋಂಕು ತಗುಲಿದ್ದು, ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ.
ಜಿಲ್ಲೆಯಲ್ಲಿ ಇಂದು 27 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 319ಕ್ಕೆ ಏರಿಕೆಯಾಗಿದೆ. ಇದರಲ್ಲಿ 68 ಮಂದಿ ಈಗಾಗಲೇ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. 240 ಮಂದಿ ಜಿಲ್ಲಾ ಕೋವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ ಏಳು ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ತೀವ್ರ ನಿಗಾ ಇರಿಸಲಾಗಿದೆ.
ಇಂದು ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ಅತಿ ಹೆಚ್ಚು ಪ್ರಕರಣ, ಅಂದರೆ 16 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.