ತುಮಕೂರು : ಜಿಲ್ಲೆಯಲ್ಲಿ ಕೊರೊನಾ ವಾರಿಯರ್ಸ್ಗಳಾಗಿ ಕೆಲಸ ಮಾಡುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಮುನ್ನೆಚ್ಚರಿಕಾ ಕ್ರಮವಾಗಿ ಕೋವಿಡ್-19 ಟೆಸ್ಟ್ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಜೆ ಸಿ ಮಾಧುಸ್ವಾಮಿ ಸೂಚನೆ ನೀಡಿದ್ದಾರೆ.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕೋವಿಡ್-19 ನಿಯಂತ್ರಣ ಕುರಿತ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸೋಂಕು ಹರಡುವಿಕೆ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದೇವೆ. ಇದಕ್ಕೆ ಶ್ರಮಿಸಿರುವ ಜಿಲ್ಲೆಯ ಎಲ್ಲಾ ಆಶಾ ಕಾರ್ಯಕರ್ತೆಯರಿಗೆ ಭೀತಿ ಉಂಟಾಗದಂತೆ ಒಮ್ಮೆ ಟೆಸ್ಟ್ಗೆ ಒಳಪಡಿಸುವಂತೆ ಆದೇಶಿಸಿದರು.
ಶಿರಾ ನಗರದಲ್ಲಿ ಒಂದೇ ಕುಟುಂಬದ ಆರು ಮಂದಿ ಸೇರಿ ಈವರೆಗೂ 14 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಹೀಗಾಗಿ ಸೋಂಕಿತ ವ್ಯಕ್ತಿಗಳು ವಾಸವಿದ್ದ ಪ್ರದೇಶದ ಜನರ ಗಂಟಲು ದ್ರವದ ಸ್ಯಾಂಪಲ್ಗಳನ್ನು ತೆಗೆದುಕೊಂಡು ಪರೀಕ್ಷೆಗೊಳಪಡಿಸಲಾಗುತ್ತಿದೆ ಎಂದು ಶಿರಾ ತಹಶೀಲ್ದಾರ್ ನಹೀದಾ ಜಮ್ ಸಭೆಗೆ ವಿವರಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ರಾಕೇಶ್ ಕುಮಾರ್, ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಶುಭ ಕಲ್ಯಾಣ್ ಸೇರಿ ಜಿಲ್ಲೆಯ ಎಲ್ಲಾ ತಾಲೂಕಿನ ತಹಶೀಲ್ದಾರ್‌ಗಳು ಹಾಜರಿದ್ದರು.