ತುಮಕೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ದಸಂಸ ಕಾರ್ಯಕರ್ತರು, ರಾಜ್ಯ ಸರ್ಕಾರದ ಬಜೆಟ್ ಅಧಿವೇಶನದಲ್ಲಿ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಭೂ ಪರಭಾರೆ ನಿಷೇಧ ಕಾಯ್ದೆಗೆ ತಿದ್ದುಪಡಿ ತರಬೇಕು ಮತ್ತು ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗ ಸಲ್ಲಿಸಿರುವ ಒಳ ಮೀಸಲಾತಿ ವರ್ಗೀಕರಣದ ವರದಿಯನ್ನು ಜಾರಿಗೊಳಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಈ ವೇಳೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ನಿಟ್ಟೂರು ರಂಗಸ್ವಾಮಿ ಮಾತನಾಡಿ, ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗ ಸಲ್ಲಿಸಿರುವ ಒಳ ಮೀಸಲಾತಿಯನ್ನು ಜಾರಿಗೆ ತರಲು ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಶಿಫಾರಸು ಮಾಡಬೇಕು. ಅಲ್ಲದೆ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಭೂ ಪರಭಾರೆ ನಿಷೇಧ ಕಾಯ್ದೆಗೆ ತಿದ್ದುಪಡಿ ತರಬೇಕು. ಜೊತೆಗೆ ಈ ಬಾರಿಯ ಬಜೆಟ್ನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಹೆಚ್ಚಿನ ಅನುದಾನ ಬಿಡುಗಡೆಗೊಳಿಸಬೇಕು ಎಂದು ಒತ್ತಾಯಿಸಿದರು.