ತುಮಕೂರು: ಧರ್ಮದ ಹೆಸರಿನಲ್ಲಿ ದೇಶದಲ್ಲಾಗುತ್ತಿರುವ ಗಲಭೆ, ಹಲ್ಲೆ ಪ್ರಕರಣಗಳನ್ನು ಮಟ್ಟ ಹಾಕಲು, ಕಾನೂನು ಸುವ್ಯವಸ್ಥೆ ಕಾಪಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ನಗರದಲ್ಲಿ ಮುಸ್ಲಿಂ ಸಮುದಾಯದವರು ಪ್ರತಿಭಟನೆ ನಡೆಸಿದರು.
ತುಮಕೂರು ಜಿಲ್ಲಾ ಮುಸ್ಲಿಂ ಒಕ್ಕೂಟ ಹಾಗೂ ಸಂವಿಧಾನ ಉಳಿವಿಗಾಗಿ ಕರ್ನಾಟಕ ಸಂಘಟನೆಯು ನಗರದ ಟೌನ್ ಹಾಲ್ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ನಡೆಸಿ, ಅಪರ ಜಿಲ್ಲಾಧಿಕಾರಿ ಕೆ. ಚನ್ನಬಸಪ್ಪ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಕರ್ನಾಟಕ ರಾಜ್ಯದ ಗುಂಡ್ಲುಪೇಟೆಯಲ್ಲಿ ದಲಿತ ಯುವಕ ಪ್ರತಾಪ್ನನ್ನು ನಗ್ನಗೊಳಿಸಿ ಥಳಿಸಿದ ಘಟನೆ, ಜಾರ್ಖಂಡ್ ರಾಜ್ಯದ ಖಾರ್ಸವಾನ್ ಎಂಬ ಜಿಲ್ಲೆಯಲ್ಲಿ ಅನ್ಸಾರಿ ಎಂಬ ಯುವಕನನ್ನು ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದಂತಹ ಘಟನೆಗಳಿಂದ ನಾಗರೀಕ ಸಮಾಜವು ತಲೆತಗ್ಗಿಸಿದಂತಾಗಿದೆ. ಹಾಗಾಗಿ ಇಂತಹ ಘಟನೆಗಳು ಸಂಭವಿಸದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.