ತುಮಕೂರು: ಶ್ರೀರಾಮುಲು ಮತ್ತು ರಮೇಶ್ ಜಾರಕಿಹೋಳಿ ಅವರಿಗೆ ಬಿಜೆಪಿ ಸರ್ಕಾರದಲ್ಲಿ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ಪಾವಗಡದಲ್ಲಿ ವಾಲ್ಮೀಕಿ ಜಾಗೃತಿ ವೇದಿಕೆಯಿಂದ ಪ್ರತಿಭಟನೆ ನಡೆಸಲಾಯಿತು.
ಪಟ್ಟಣದ ತಹಶೀಲ್ದಾರ್ ಕಚೇರಿ ಮುಂಭಾಗ ಧರಣಿ ನಡೆಸಿದ ಪ್ರತಿಭಟನಾಕಾರರು, ಹಿಂದೆ ಬಿಜೆಪಿ ಪಕ್ಷ ಹೇಳಿರುವ ಹಾಗೆ ಸಂಪುಟ ರಚನೆಯಲ್ಲಿ ಶ್ರೀರಾಮುಲು ಮತ್ತು ರಮೇಶ್ ಜಾರಕಿಹೊಳಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು. ವಾಲ್ಮೀಕಿ ಸಮುದಾಯದ ಮೂವರಿಗೆ ಸಚಿವ ಸ್ಥಾನ ನೀಡುವುದಾಗಿ ಭರವಸೆ ನೀಡಿತ್ತು. ಆದರೆ, ಇಂದು ಉಪಮುಖ್ಯಮಂತ್ರಿ ಸ್ಥಾನ ಕೈ ತಪ್ಪಿಸಿ ಸಮುದಾಯವನ್ನು ನಿರ್ಲಕ್ಷ್ಯ ಮಾಡಿರುವುದು ಖಂಡನೀಯ ಎಂದರು.
ರಾಜ್ಯದಲ್ಲಿ ವಾಲ್ಮೀಕಿ ಸಮುದಾಯ ಸುಮಾರು ಎಪ್ಪತ್ತು ಲಕ್ಷ ಜನಸಂಖ್ಯೆ ಹೊಂದಿದ್ದು, ರಾಜ್ಯದ ಮೂರನೇ ಅತಿದೊಡ್ಡ ಸಮುದಾಯ ಎನಿಸಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ಶ್ರೀರಾಮುಲು ಮತ್ತು ರಮೇಶ್ ಜಾರಕಿಹೊಳಿ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ಹಾಗೂ ಮೂವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದ್ದಾರೆ.