ತುಮಕೂರು: ಕೊರೊನಾ ವಾರಿಯರ್ಸ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಕನಿಷ್ಠ ಗೌರವಧನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಲಾಯಿತು.
ಕೊರೊನಾ ಸಮಯದಲ್ಲಿ ಮನೆ ಮನೆಗಳಿಗೆ ತೆರಳಿ, ಕಾರ್ಯ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರ ಮಾಸಿಕ 12 ಸಾವಿರ ಗೌರವಧನ ಖಾತರಿಪಡಿಸಬೇಕು, ಕೋವಿಡ್ -19 ವಿರುದ್ಧ ಹೋರಾಟಕ್ಕೆ ಅಗತ್ಯವಿರುವಷ್ಟು ಸಂರಕ್ಷಣಾ ಸಾಮಗ್ರಿಗಳು ಹಾಗೂ ಕೋವಿಡ್ -19 ಗೆ ತುತ್ತಾದ ಆಶಾ ಕಾರ್ಯಕರ್ತರಿಗೆ ಪರಿಹಾರ, ಸಂಪೂರ್ಣ ಚಿಕಿತ್ಸೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹಲವು ದಿನಗಳಿಂದ ಪ್ರತಿಭಟನೆ ನಡೆಸಿದರೂ, ಸರ್ಕಾರ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ಪ್ರೊ. ಕೆ.ದೊರೆರಾಜು, ಆಶಾ ಕಾರ್ಯಕರ್ತೆಯರು ಜನರ ರಕ್ಷಣೆಗಾಗಿ ಜೀವದ ಹಂಗು ತೊರೆದು ಕೆಲಸ ನಿರ್ವಹಿಸುತ್ತಿದ್ದಾರೆ. ಇವರಿಗೆ ಕನಿಷ್ಠ ವೇತನ ಹಾಗೂ ವಿವಿಧ ಸೌಲಭ್ಯಗಳನ್ನು ನೀಡುವಂತೆ ಒತ್ತಾಯಿಸುತ್ತಿದ್ದೇವೆ. ಸರ್ಕಾರ ಸೂಕ್ತ ರೀತಿಯಲ್ಲಿ ಸ್ಪಂದಿಸಿದರೆ ದೇಶದ ಜನರು ಉಳಿಯುತ್ತಾರೆ. ದೇಶವನ್ನು ರಕ್ಷಿಸುತ್ತಿರುವ ನಿಜವಾದ ವಾರಿಯರ್ಸ್ ಆಶಾ ಕಾರ್ಯಕರ್ತೆಯರು ಎಂದರು.
ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಸಂಚಾಲಕಿ ಮಂಜುಳಾ ಮಾತನಾಡಿ, ಇನ್ನು ಎರಡು ಮೂರು ದಿನಗಳಲ್ಲಿ ನಮ್ಮ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ, ಇದೇ ತಿಂಗಳು 29ರಂದು ರಾಜ್ಯಾದ್ಯಂತ ಜೈಲ್ ಭರೋ ಚಳವಳಿ ನಡೆಸಲಾಗುವುದು ಎಂದು ಎಚ್ಚರಿಕೆ ರವಾನಿಸಿದರು.