ತುಮಕೂರು: ಪ್ರಧಾನಿ ನರೇಂದ್ರ ಮೋದಿ ಅವರು ಗುರುದ್ವಾರಕ್ಕೆ ಭೇಟಿ ನೀಡುವ ಮೂಲಕ ರೈತರ ಹೋರಾಟವನ್ನು ಕೇವಲ ಪಂಜಾಬ್ ರಾಜ್ಯದ ಹೋರಾಟ ಎಂದು ಬಿಂಬಿಸಲು ಹೊರಟಿದ್ದಾರೆ. ಈ ಧೋರಣೆ ಸರಿಯಲ್ಲ. ದೇಶದಾದ್ಯಂತ ರೈತ ವಿರೋಧಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಎ.ಐ.ಕೆ.ಎಸ್.ಸಿ.ಸಿ. ಸಂಘಟನಾ ಕಾರ್ಯದರ್ಶಿ ಬಿ.ಉಮೇಶ್ ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಈಗಲಾದರೂ ಕೇಂದ್ರ ಸರ್ಕಾರ ಎಚ್ಚೆತ್ತುಕೊಂಡು ರೈತರ ಪ್ರತಿಭಟನೆಗೆ ಮಣಿಯಬೇಕು. ಇಲ್ಲದಿದ್ದರೆ ಡಿಸೆಂಬರ್ 27ರಂದು ದೇಶಾದ್ಯಂತ ತಟ್ಟೆ ಬಡಿಯುವ ಮೂಲಕ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.
ದೆಹಲಿಯಲ್ಲಿ ನಡೆಯುತ್ತಿರುವ ರೈತರ ಸತ್ಯಾಗ್ರಹಕ್ಕೆ ಪೂರಕವಾಗಿ ಎ.ಐ.ಕೆ.ಎಸ್.ಸಿ.ಸಿ ನೇತೃತ್ವದಲ್ಲಿ ಉಪವಾಸ ಸತ್ಯಾಗ್ರಹ ನಡೆಸಿದ ಅವರು, ಕೇಂದ್ರ ಸರ್ಕಾರದ ಕೃಷಿ ಸಂಬಂಧಿತ ಮೂರು ಕಾಯ್ದೆ ಮತ್ತು ವಿದ್ಯುತ್ ತಿದ್ದುಪಡಿ ಕಾಯ್ದೆ, ಕಾರ್ಮಿಕ ಕಾಯ್ದೆ ವಾಪಸ್ ಪಡೆಯುವಂತೆ ಒತ್ತಾಯಿಸಿದರು.
ಓದಿ: ಕಲಬುರಗಿ ಟೆಂಟ್ ಹೌಸ್ಗೆ ಬೆಂಕಿ:10 ಲಕ್ಷ ರೂ. ಮೌಲ್ಯದ ಸ್ವತ್ತು ಸುಟ್ಟು ಭಸ್ಮ
ಉಪವಾಸ ಸತ್ಯಾಗ್ರಹ ಮಾಡುವ ಮೂಲಕ ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಬೆಂಬಲ ನೀಡಲಾಗುತ್ತಿದೆ. ಸರ್ಕಾರ ಈಗಲಾದರೂ ಎಚ್ಚೆತ್ತುಕೊಂಡು ರೈತರಿಗೆ ಮರಣ ಶಾಸನವಾಗಿರುವ 3 ಕಾಯ್ದೆಗಳನ್ನು ಹಿಂಪಡೆಯಬೇಕು. ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯಲ್ಲಿ ಹಲವಾರು ರೈತರು ಮೃತಪಟ್ಟಿದ್ದು, ಇದರ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸ್ಪಷ್ಟನೆ ನೀಡಬೇಕು. ಗುರುದ್ವಾರಕ್ಕೆ ನರೇಂದ್ರ ಮೋದಿಯವರು ಭೇಟಿ ನೀಡುವ ಮೂಲಕ ಈ ಹೋರಾಟವನ್ನು ಕೇವಲ ಪಂಜಾಬ್ ರಾಜ್ಯದ ಹೋರಾಟ ಎಂದು ಬಿಂಬಿಸಲು ಹೊರಟಿದ್ದಾರೆ ಎಂದು ಆರೋಪಿಸಿದರು.