ತುಮಕೂರು: ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ವಿಚಾರಕ್ಕೆ ಹಾಗೂ ಬ್ರಿಟಿಷರನ್ನು ಸಮರ್ಥಿಸಿದ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ. ಕೆ ಶಿವಕುಮಾರ್ ವಿರುದ್ಧ ತುಮಕೂರು ಜಿಲ್ಲಾ ಎಸ್.ಟಿ ಮೋರ್ಚಾ ಹಾಗೂ ಯುವ ಮೋರ್ಚಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ, ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ.
ನಗರದ ಬಿಜಿಎಸ್ ವೃತ್ತದಲ್ಲಿ ಪ್ರತಿಭಟನೆ ನಡೆಸುತ್ತಾ ಸಾಗಿದ ಕಾರ್ಯಕರ್ತರು ಕಾಂಗ್ರೆಸ್ ಕಚೇರಿಯತ್ತ ಧಾವಿಸುತ್ತಿದ್ದಂತೆ ಧಿಕ್ಕಾರ ಕೂಗಿದ್ದಾರೆ. ಆಗ ಅಲ್ಲಿಯೇ ಇದ್ದ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶಗೊಂಡಿದ್ದಾರೆ. ನಂತರ ಅವರೂ ಕೂಡಾ ಬಿಜೆಪಿ ವಿರುದ್ದ ಘೋಷಣೆ ಕೂಗಿದ್ದಾರೆ. ಪರಿಸ್ಥಿತಿ ಹತೋಟಿಗೆ ತರಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.
ಜಿಲ್ಲೆ ಎಸ್.ಟಿ ಮೋರ್ಚಾ ಕಾರ್ಯದರ್ಶಿ ರಾಕೇಶ್ ಟಿ.ಆರ್, ಯುವ ಮೊರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯಶಸ್ ಉಪಾಧ್ಯಕ್ಷ, ವಿನಯ್ ಟಿ.ಡಿ ನಗರ ಪ್ರಧಾನ ಕಾರ್ಯದರ್ಶಿ ದಯಾನಂದ, ಯುವ ಮೋರ್ಚಾ ಅಧ್ಯಕ್ಷ ನಾಗೇಂದ್ರ ಚನ್ನಬಸಪ್ಪ, ರಕ್ಷಿತ್ ಪವನ್ ಮತ್ತಿತ್ತರರು ಉಪಸ್ಥಿತರಿದ್ದರು. ಕಾಂಗ್ರೆಸ್ ಕಚೇರಿಯತ್ತ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ಕಾರ್ಯಕರ್ತರ ವಿರುದ್ಧ ಪೊಲೀಸರಿಗೆ ದೂರು ನೀಡಲು ಕಾಂಗ್ರೆಸ್ ಮುಖಂಡರು ನಿರ್ಧರಿಸಿದ್ದಾರೆ.
ಓದಿ: ಸರ್ಕಾರಿ ಹುದ್ದೆ, ಶಿಕ್ಷಣ ಸೇರಿ ಎಲ್ಲ ಕ್ಷೇತ್ರಗಳಲ್ಲೂ ಕೇಸರೀಕರಣ: ಡಿ.ಕೆ ಶಿವಕುಮಾರ್