ತುಮಕೂರು: ಶಿರಾ ವಿಧಾನಸಭಾ ಉಪಚುನಾವಣೆಯಲ್ಲಿ ಪ್ರಚಾರದ ಕಾವು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಇನ್ನೊಂದೆಡೆ ಪ್ರಮುಖ ಮೂರು ಪಕ್ಷಗಳು ಕೋವಿಡ್ ನಿಯಮಾವಳಿಗಳನ್ನು ಉಲ್ಲಂಘಿಸಿವೆ ಎಂದು ಫ್ಲೈಯಿಂಗ್ ಸ್ಕ್ವಾಡ್ ಟೀಮ್ ಶಿರಾ ನಗರ ಪೊಲೀಸ್ ಠಾಣೆಗೆ ದೂರು ನೀಡಿದೆ. ಅಲ್ಲದೆ ಮೆರವಣಿಗೆ ನಡೆಸಲು ಅನುಮತಿ ಪಡೆದಿರುವ ಪಕ್ಷದ ಮುಖಂಡರ ವಿರುದ್ಧ ಪ್ರಕರಣ ದಾಖಲಿಸುವಂತೆ ಮನವಿ ಮಾಡಿದೆ.
ಬಿಜೆಪಿ ವಿರುದ್ಧ ದೂರು:
ಅಕ್ಟೋಬರ್ 16 ರಂದು ಬಿಜೆಪಿ ಅಭ್ಯರ್ಥಿ ಡಾ. ರಾಜೇಶ್ಗೌಡ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಶಿರಾ ಮಿನಿ ವಿಧಾನಸೌಧದ ಬಳಿ ಅತಿ ಹೆಚ್ಚು ಜನರು ಜಮಾಯಿಸಿದ್ದರು. ಈ ಸಂದರ್ಭದಲ್ಲಿ ಹಾಜರಿದ್ದ ಫ್ಲೈಯಿಂಗ್ ಸ್ಕ್ವಾಡ್ ತಂಡವು ಬಿಜೆಪಿಯ ಕಾರ್ಯಕರ್ತರು ಕೋವಿಡ್ ನಿಯಮಾವಳಿಗಳನ್ನು ಉಲ್ಲಂಘಿಸಿರುವುದನ್ನು ಗಮನಿಸಿದೆ. ಅಲ್ಲದೆ ಸ್ಥಳದಲ್ಲಿದ್ದ ಪೊಲೀಸರು ಮಿನಿವಿಧಾನಸೌಧದ ಬಳಿ ಜಮಾಯಿಸಿದ್ದ ಜನರನ್ನು ಚದುರಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕ್ರಮವಹಿಸಿದ್ದರು. ಈ ಕುರಿತಾದ ವಿಡಿಯೋ ರೆಕಾರ್ಡಿಂಗ್ಗಳು ಚುನಾವಣಾ ಶಾಖೆಯಲ್ಲಿ ಲಭ್ಯವಿದ್ದು, ನಿಯಮಾವಳಿಗಳು ಉಲ್ಲಂಘನೆ ಆಗಿರುವುದರಿಂದ ಈ ಕುರಿತು ಕಾನೂನು ಕ್ರಮ ಕೈಗೊಳ್ಳುವಂತೆ ಶಿರಾ ಪೊಲೀಸ್ ಠಾಣೆಗೆ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿ ತಿರುಮಲ ದೂರು ನೀಡಿದ್ದಾರೆ. ಮಾಸ್ಕ್ಗಳನ್ನು ಧರಿಸಿ ಥರ್ಮಲ್ ಸ್ಕ್ಯಾನಿಂಗ್ ಮತ್ತು ಸ್ಯಾನಿಟೈಸರ್ ಬಳಸಿ ಕೋವಿಡ್ ನಿಯಮಾವಳಿಗಳನ್ನು ಅನುಸರಿಸುವುದಾಗಿ ಈಗಾಗಲೇ ಅನುಮತಿ ಪಡೆದಿದ್ದ ಶಿರಾ ಬಿಜೆಪಿ ನಗರಾಧ್ಯಕ್ಷ ವಿಜಯರಾಜ್ ವಿರುದ್ಧ ದೂರು ಸಲ್ಲಿಸಲಾಗಿದೆ.
ಜೆಡಿಎಸ್ ವಿರುದ್ಧ ದೂರು:
ಅಕ್ಟೋಬರ್ 14 ರಂದು ಜೆಡಿಎಸ್ ಅಭ್ಯರ್ಥಿ ಪರವಾಗಿ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಕೋವಿಡ್ ನಿಯಮಾವಳಿಗಳನ್ನು ಉಲ್ಲಂಘನೆ ಮಾಡಲಾಗಿದೆ ಎಂದು ಆರೋಪಿಸಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿ ಮಂಜು ಪ್ರಸಾದ್ ಶಿರಾ ಜೆಡಿಎಸ್ ನಗರ ಅಧ್ಯಕ್ಷ ಆರ್. ಉಗ್ರೇಶ್ ವಿರುದ್ಧ ಶಿರಾ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಶಿರಾ ಮಿನಿ ವಿಧಾನಸೌಧದ ಹೊರವಲಯದಲ್ಲಿ ನೂರಕ್ಕೂ ಹೆಚ್ಚು ಜನರು ಭಾಗವಹಿಸಿ ನಿಯಮಾವಳಿಗಳನ್ನು ಉಲ್ಲಂಘಿಸಿದ್ರು. ಅಲ್ಲದೆ ಪೊಲೀಸರು ತಕ್ಷಣ ಕ್ರಮ ಕೈಗೊಂಡು ಜನರನ್ನು ಚದುರಿಸಿದರು ಎಂದು ದೂರಿನಲ್ಲಿ ವಿವರಿಸಿದ್ದಾರೆ.
ಕಾಂಗ್ರೆಸ್ ವಿರುದ್ಧ ದೂರು:
ಅಕ್ಟೋಬರ್ 15ರಂದು ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಶಿರಾ ಮಿನಿ ವಿಧಾನಸೌಧ ಕಚೇರಿಯ ಹೊರವಲಯದಲ್ಲಿ ನೂರಕ್ಕೂ ಹೆಚ್ಚು ಜನರು ಭಾಗವಹಿಸಿದ್ದು, ನಿಯಮಾವಳಿಗಳನ್ನು ಉಲ್ಲಂಘಿಸಿರುವುದು ಕಂಡುಬಂದಿದೆ. ಹೀಗಾಗಿ ಶಿರಾ ನಗರ ಕಾಂಗ್ರೆಸ್ ಅಧ್ಯಕ್ಷ ಪಿ.ಆರ್ ಮಂಜುನಾಥ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಫ್ಲೈಯಿಂಗ್ ಸ್ಕ್ವಾಡ್ ತಂಡದ ಅಧಿಕಾರಿ ಶಿರಾ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಒಟ್ಟಾರೆ ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಎಲ್ಲ ಪಕ್ಷಗಳು ಕೊರೊನಾ ನಿಯಮಗಳನ್ನು ಗಾಳಿಗೆ ತೂರುತ್ತಿವೆ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ.